ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ (ಎಫ್‌ಐಆರ್39/2025) ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಮತ್ತು ವಿಠಲ್‌ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿದೆ.
ವಕೀಲರ ವಾದ: ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ”ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿರುವುದು 150 ತಾಸು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಆ ನೋಟಿಸ್ ಮತ್ತು ವಿಚಾರಣೆ ನಡೆಸಿರುವ ಸಂದರ್ಭದಲ್ಲಿ ಅರ್ಜಿದಾರರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿತ್ತು. ಇದೀಗ ಅರ್ಜಿದಾರರನ್ನು ಆರೋಪಿಗಳನ್ನಾಗಿ ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ” ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ತಡೆಯಾಜ್ಞೆ ತೆರವುಗೊಳಿಸಿ ವಿಚಾರಣೆಯನ್ನು ಮುಂದೂಡಿತು.


