ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅವರ ನಾಪತ್ತೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಜ್ಞಾನೇಂದ್ರ ಕುಮಾರ್ ದೆಹಲಿಗೆ ಹೋಗಲೆಂದು ವಿಮಾನ ಟಿಕೆಟ್ ಬುಕ್ ಮಾಡಿದ್ದರು. ಈ ಬಗ್ಗೆ ಅವರು ಕುಟುಂಬದವರಿಗೆ ಮತ್ತು ಆತ್ಮೀಯರಿಗೆ ಮಾಹಿತಿ ನೀಡಿದ್ದರು. ಆದರೆ ಅವರು ವಿಮಾನ ಹತ್ತಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಮಾನ ನಿಲ್ದಾಣದವರೆಗೆ ಅವರ ಚಲನವಲನವನ್ನು ಪೊಲೀಸರು ಪರಿಶೀಲಿಸಿದ್ದು, ನಂತರ ಮೊಬೈಲ್ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ.
ಮೊಬೈಲ್ ಸ್ವಿಚ್ ಆಫ್ ಆಗಿರುವ ಹಿನ್ನೆಲೆಯಲ್ಲಿ ಅವರು ಬೇರೆ ಮಾರ್ಗದ ಮೂಲಕ ದೆಹಲಿಗೆ ತೆರಳಿದ್ದಾರೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ಕ್ರಿಯಾಶೀಲರಾಗಿದ್ದಾರೆ. ಕುಟುಂಬದವರಿಗೂ ಸಂಪರ್ಕ ಸಾಧ್ಯವಾಗದಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.
ಜ್ಞಾನೇಂದ್ರ ಕುಮಾರ್ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅವರಿಗೆ ಆರೋಗ್ಯ ಸಮಸ್ಯೆ ಇತ್ತು ಎಂಬ ಮಾಹಿತಿಯಿದೆ.
ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಕುರಿತು ಹಿರಿಯ ಐಎಎಸ್ ಅಧಿಕಾರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಪೊಲೀಸರು ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳು, ವಾಹನಗಳ ಸಂಚಾರ ಹಾಗೂ ಲಭ್ಯವಿರುವ ಇತರ ತಾಂತ್ರಿಕ ಮಾಹಿತಿಗಳನ್ನು ಪರಿಶೀಲಿಸಲಾಗುತ್ತಿದೆ.
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಜ್ಞಾನೇಂದ್ರ ಕುಮಾರ್ ಅವರ ನಾಪತ್ತೆ ಪ್ರಕರಣ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಜ್ಞಾನೇಂದ್ರ ಕುಮಾರ್ ಆ ಅವಧಿಯಲ್ಲಿ ಕೆಪಿಎಸ್ಸಿನಲ್ಲಿ ವಹಿಸಿದ್ದ ಪಾತ್ರ ಸೇರಿದಂತೆ ಹಲವು ವಿಚಾರಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ. ಈ ಸಂಬಂಧ ಇಡಿ ದಾಳಿ ನಡೆದ ಮರುದಿನವೇ ಅವರು ನಾಪತ್ತೆಯಾಗಿರುವುದು ಪ್ರಕರಣದ ಬಗ್ಗೆ ಕುತೂಹಲ ಮತ್ತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.


