ಕೋಗಿಲು ಕ್ರಾಸ್ ಫಕೀರ್ ಬಡಾವಣೆಯಲ್ಲಿ ಇತ್ತೀಚೆಗೆ ನಡೆದ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಒಂದು ವೇಳೆ ಪೊಲೀಸ್ ತಪಾಸಣೆಯಲ್ಲಿ ಅಕ್ರಮ ಬಾಂಗ್ಲಾದೇಶಿಗರು ಪತ್ತೆಯಾದಲ್ಲಿ ಅವರಿಗೆ ಯಾವುದೇ ಪರ್ಯಾಯ ವಸತಿ ಸೌಲಭ್ಯ ನೀಡುವುದಿಲ್ಲ ಮತ್ತು ತಕ್ಷಣವೇ ಗಡಿಪಾರು ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರ ಪಟ್ಟಿಯನ್ನು ‘ ಬೃಹತ್ ಬೆಂಗಳೂರು ಪ್ರಾಧಿಕಾರ ‘ ಸಿದ್ಧಪಡಿಸಲಿದ್ದು, ಈ ಪಟ್ಟಿಯಲ್ಲಿರುವ ಪ್ರತಿಯೊಬ್ಬರ ಹಿನ್ನೆಲೆ, ಮೂಲ ಸ್ಥಳ ಮತ್ತು ಬೆಂಗಳೂರಿನಲ್ಲಿ ಅವರು ವಾಸಿಸುತ್ತಿರುವ ಅವಧಿಯನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸಲಿದ್ದಾರೆ ಎಂದರು.
ಒಂದು ವೇಳೆ ತಪಾಸಣೆಯ ವೇಳೆ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳು ಪತ್ತೆಯಾದಲ್ಲಿ, ಅವರನ್ನು ತಕ್ಷಣವೇ ವಶಕ್ಕೆ ಪಡೆದು ನಿಯಮಾನುಸಾರ ಅವರ ದೇಶಕ್ಕೆ ಗಡಿಪಾರು ಮಾಡಲಾಗುವುದು ಹಾಗೂ ಅಂತಹ ವಿದೇಶಿ ಪ್ರಜೆಗಳಿಗೆ ಸರ್ಕಾರದ ವತಿಯಿಂದ ಯಾವುದೇ ಪರ್ಯಾಯ ಸೌಲಭ್ಯ ಅಥವಾ ವಸತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದಲ್ಲದೆ, ಈ ವಲಸಿಗರು ಯಾವುದಾದರೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಅಂತಹವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಕೋಗಿಲು ಲೇಔಟ್ ನಿರಾಶ್ರಿತರು ಅಕ್ರಮ ಬಾಂಗ್ಲಾದೇಶಿಗರು ಎಂದು ಆರೋಪಿಸಿದ್ದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, “ಮಾಜಿ ಗೃಹ ಸಚಿವರಾಗಿ ಕಾನೂನು ಪ್ರಕ್ರಿಯೆ ತಿಳಿದಿರುವ ಅಶೋಕ್ ಅವರು ರಾಜಕೀಯ ಕಾರಣಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ” ಎಂದು ಟೀಕಿಸಿದರು


