ಕೊಡಗಿನಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಕುಶಾಲನಗರದಲ್ಲಿ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಇದೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಸ್ಥಳೀಯರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದಲ್ಲಿ ನೀರು ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಶನಿವಾರ ಮಧ್ಯಾಹ್ನದ ವೇಳೆ ಕಾವೇರಿ ನದಿಗೆ 3,000 ರಿಂದ 5,000 ಕ್ಯೂಸೆಕ್ ನೀರು ಹರಿಸುವ ಸಾಧ್ಯತೆ ಇದೆ. ಇದರಿಂದಾಗಿ ಸ್ಥಳೀಯರು ಮುನ್ನೆಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ನದಿ ತೀರದಲ್ಲಿ ಅನಗತ್ಯ ಓಡಾಟ, ಮೀನುಗಾರಿಕೆ ಹಾಗೂ ನೀರಿಗೆ ಇಳಿಯಬಾರದು. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಸಾರ್ವಜನಿಕರು ಸ್ಥಳೀಯ ಆಡಳಿತದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಾವೇರಿ ನೀರಾವರಿ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನದಿ ತೀರದಿಂದ ಜಾನುವಾರುಗಳು, ಕೃಷಿ ಉಪಕರಣಗಳು ಹಾಗೂ ಇತರ ಆಸ್ತಿ-ಪಾಸ್ತಿಗಳನ್ನು ಸ್ಥಳಾಂತರಿಸುವಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದರೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವ ಕಾರಣ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ. ಕೃಷ್ಣಾ ನದಿ ಮೇಲ್ಭಾಗದಲ್ಲಿ ಉತ್ತಮ ಮಳೆಯಿಂದ ಜಲಾಶಯಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ರಾಯಚೂರಿನ ಕೃಷ್ಣಾ ನದಿ ಪಾತ್ರದ ಜನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಆಲಮಟ್ಟಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಹೊರಹರಿವಿನ ಪ್ರಮಾಣ ಹೆಚ್ಚಳವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸವಸಾಗರ ಜಲಾಶಯಕ್ಕೆ 70 ಸಾವಿರ ಕ್ಯುಸೆಕ್ ನೀರು ಒಳಹರಿವು ಇದ್ದು, ಹೆಚ್ಚು ಪ್ರಮಾಣದ ನೀರು ಹರಿದು ಬರುವ ಸಾಧ್ಯತೆಯಿದೆ. ಜಲಾಶಯದಿಂದ ಹಂತ ಹಂತವಾಗಿ 30 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ಜನರು ಎಚ್ಚರ ವಹಿಸುವಂತೆ ತಿಳಿಸಲಾಗಿದೆ.


