ಬೆಂಗಳೂರು: ನಾವೆಲ್ಲರೂ ಭಾರತೀಯರು, ಎಲ್ಲರ ಪ್ರಾಣ ಕೂಡ ಮುಖ್ಯ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ತೀರ್ಮಾನಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಗಳಿಗೆ ಬದ್ಧ ಎಂದು ತಿಳಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಅವರು ಪ್ರತಿಕ್ರಿಯೆ ನೀಡಿದರು.
ಪಾಕಿಸ್ತಾನದ ಮೇಲೆ ಯುದ್ಧ ಬೇಡ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಭಾರತ ಉಳಿಯಬೇಕು ಎನ್ನುವುದು ನಮ್ಮ ನಿಲುವು” ಎಂದರು.
ಸರ್ವಪಕ್ಷ ಸಭೆಗೆ ಪ್ರಧಾನಿಗಳ ಗೈರು ಬಗ್ಗೆ ಕೇಳಿದಾಗ, “ಪ್ರಧಾನಿಯವರು ಇರಬೇಕಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಹೇಳಿದ್ದಾರೆ. ಇದಕ್ಕೆ ಪ್ರಧಾನಿ ಅವರೇ ಉತ್ತರ ಕೊಡಬೇಕು. ಮಾಧ್ಯಮಗಳು ಸಹ ಈ ದೇಶದಲ್ಲಿ ಶಾಂತಿ ನೆಲೆಸಲು ಸಹಕಾರ ನೀಡಬೇಕು ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದರು.