ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿಯಲ್ಲಿ 5 ಕೆಜಿ ಅಕ್ಕಿ ಕಡಿತ ಮಾಡಿ ಇಂದಿರಾ ಆಹಾರ ಕಿಟ್ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟದ ಸಭೆಯ ನಂತರ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಅವರು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆಯ ನಿರ್ಣಯಗಳ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ವಿವರಿಸಿದರು.
10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ , ತೊಗರಿಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ. ಹಾರ ಕಿಟ್ ನೀಡುವುದರಿಂದ ಸರ್ಕಾರಕ್ಕೆ ಸ್ವಲ್ಪ ಮಟ್ಟಿಗೆ ಅಧಿಕ ಹೊರೆ ಆಗಲಿದೆ ಎಂದು ಸಚಿವರು ಹೇಳಿದರು. 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿಗೆ ಬದಲಾಗಿ 2 ಕೆಜಿ ತೊಗರಿ ಬೇಳೆ, 1 ಕೆಜಿ ಅಡುಗೆ ಎಣ್ಣೆ, 1 ಕೆಜಿ ಸಕ್ಕರೆ ಮತ್ತು 1 ಕೆಜಿ ಉಪ್ಪು ಸೇರಿದ ಇಂದಿರಾ ಆಹಾರ ಕಿಟ್ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ, ಖಾಸಗಿ ಸೇರಿ ಎಲ್ಲ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ಕಡ್ಡಾಯ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. 2025-26ನೇ ಸಾಲಿನ ರಸಗೊಬ್ಬರ ದಾಸ್ತಾನಿಗೆ 200 ಕೋಟಿ ರೂ., 200 ಕೋಟಿ ರೂ. ಸಾಲಕ್ಕೆ ಬಂಡವಾಳ ಖಾತ್ರಿ ನೀಡುವುದಕ್ಕೆ ಸಂಪುಟ ಸಮ್ಮತಿಸಿದೆ.
ಜಲಾನಯನ ಅಭಿವೃದ್ಧಿ ಘಟಕ, ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆ. 90 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ 15 ಯೋಜನೆಗಳು 15 ತಾಲೂಕುಗಳಲ್ಲಿ ಅನುಷ್ಠಾನ, ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಅನುಮೋದನೆ ನೀಡಿದೆ.
ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ 11 ಶ್ರಮಿಕ ವಸತಿ ಶಾಲೆಗಳನ್ನು ರೂ.405.55 ಕೋಟಿ ರೂ. ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2025″ ಅನುಮೋದನೆ. ಸೇತುವೆಗಳು ಪುನರ್ ನಿರ್ಮಾಣ ಹಾಗೂ ಪುನಶ್ವೇತನ ಕಾಮಗಾರಿಗಳನ್ನು 2000 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ತಾತ್ವಿಕ ಅನುಮೋದನೆ ಪ್ರಕಟಿಸಿದೆ.