ಬೆಂಗಳೂರು: ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 170 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಗುಜರಾತ್ ಟೈಟಾನ್ಸ್ ಗೆ ಒಡ್ಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆರ್ ಸಿಬಿ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 170 ರನ್ ಕಲೆ ಹಾಕಿದೆ.
ಆರ್ ಸಿಬಿ ತಂಡದ ಮಾಜಿ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್ ಸಿಬಿ ಆರಂಭಿಕ ಆಘಾತದಿಂದ ತತ್ತರಿಸಿತು. ಒಂದು ಹಂತದಲ್ಲಿ 42 ರನ್ ಗೆ 4 ವಿಕೆಟ್ ಕಳೆದುಕೊಂಡು ತತ್ತರಿಸಿತು. ವಿರಾಟ್ ಕೊಹ್ಲಿ (7) ಫಾಲ್ ಸಾಲ್ಟ್ (14), ದೇವದತ್ ಪಡಿಕಲ್ (4) ಮತ್ತು ನಾಯಕ ರಜತ್ ಪಟಿದಾರ್ (12) ವಿಫಲರಾದರು.
ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ 40 ಎಸೆತಗಳಲ್ಲಿ 1 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಿಂದ 54 ರನ್ ಗಳಿಸಿ ಅರ್ಧಶತಕದ ನೆರವು ನೀಡಿದರು. ಜಿತೇಶ್ ಕುಮಾರ್ 21 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 33 ರನ್ ಗಳಿಸಿದರು. ಕೊನೆಯ ಹಂತದಲ್ಲಿ ಟಿಮ್ ಡೇವಿಡ್ 18 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 32 ರನ್ ಚಚ್ಚಿದರು.
ಮೊಹಮದ್ ಸಿರಾಜ್ 3 ವಿಕೆಟ್ ಪಡೆದರೆ, ಸಾಯಿ ಕಿಶೋರ್ 2, ಆರ್ಷದ್ ಖಾನ್, ಪ್ರಸಿದ್ಧ ಕೃಷ್ಣ ಮತ್ತು ಇಶಾಂತ್ ಶರ್ಮ ತಲಾ 1 ವಿಕೆಟ್ ಗಳಿಸಿದರು.