ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಪಡಿಸಿ ಆದೇಶಿಸಿದೆ. ಈ ಮೂಲಕ ಐಪಿಎಲ್ ವಿಜಯೋತ್ಸವ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಪಡಿಸಿ ಆದೇಶಿಸಿದೆ. ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಆದೇಶ ನೀಡಿ, ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ. ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಿಕಾಸ್ ಕುಮಾರ್ ಪರ ವಾದ ಮಂಡಿಸಿದರು.
ಅಂದು ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಈ ಅಮಾನತು ಪ್ರಶ್ನಿಸಿ ವಿಕಾಸ್ ಕುಮಾರ್ ಸಿಎಟಿಗೆ ಮನವಿ ಸಲ್ಲಿಸಿದ್ದರು.
ಮನವಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಜಿ ಹೆಚ್ಚುವರಿ ಕಾಲಾವಕಾಶ ಕೋರಿದ್ದರು. ಅದರಂತೆ ವಿಚಾರಣೆ ಮುಂದೂಡಲಾಗಿತ್ತು. ಈಗ ವಿಕಾಸ್ ಕುಮಾರ್ ಅವರ ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ನಿರ್ದೇಶನ ನೀಡಿದೆ, ಪೊಲೀಸ್ ಆಯುಕ್ತ ಬಿ ದಯಾನಂದ ಹಾಗೂ ಇತರರ ಅಮಾನತು ಆದೇಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಘಟನೆಯ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ, ಸುನಿಲ್ ಮ್ಯಾಥ್ಯೂ, ಕಿರಣ್, ಶಮಂತ್ ಅವರನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು.