ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಕೇಂದ್ರಕ್ಕೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೇ ಶುಕ್ರವಾರ ವಿಚಾರಣೆ ನಡೆಸಲಿದೆ. ಅರ್ಜಿದಾರರಾದ ಜಹೂರ್ ಅಹ್ಮದ್ ಭಟ್ ಮತ್ತು ಕಾರ್ಯಕರ್ತ ಖುರ್ಷೈದ್ ಅಹ್ಮದ್ ಮಲಿಕ್ ಪರವಾಗಿ ಹಾಜರಾದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಆ ದಿನದ ಪ್ರಕರಣದ ಪಟ್ಟಿಯಿಂದ ಈ ವಿಷಯವನ್ನು ತೆಗೆದುಹಾಕಬಾರದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರನ್ನು ಕೋರಿದ್ದಾರೆ. ಸಿಜೆಐ ಗವಾಯಿ ಈ ಮನವಿಗೆ ಒಪ್ಪಿಕೊಂಡಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ನಂತರವೂ ರಾಜ್ಯತ್ವವನ್ನು ಪುನಃಸ್ಥಾಪಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ಇದು ಒಕ್ಕೂಟ ವ್ಯವಸ್ಥೆಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. “ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವದ ಸ್ಥಾನಮಾನವನ್ನು ಕಾಲಮಿತಿಯೊಳಗೆ ಪುನಃಸ್ಥಾಪಿಸದಿರುವುದು ಭಾರತದ ಸಂವಿಧಾನದ ಮೂಲ ರಚನೆಯ ಭಾಗವಾಗಿರುವ ಒಕ್ಕೂಟ ವ್ಯವಸ್ಥೆಯ ಕಲ್ಪನೆಯನ್ನು ಉಲ್ಲಂಘಿಸುತ್ತದೆ” ಎನ್ನಲಾಗಿದೆ.
ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಗೆ ಚುನಾವಣೆಗಳು ಶಾಂತಿಯುತವಾಗಿ ನಡೆದಿವೆ. ಜಮ್ಮು-ಕಾಶ್ಮೀರದ ರಾಜ್ಯತ್ವದ ಪುನಃಸ್ಥಾಪನೆಗೆ ಅಡ್ಡಿಯಾಗುವ ಅಥವಾ ತಡೆಯುವ ಯಾವುದೇ ಭದ್ರತಾ ಕಾಳಜಿಗಳು, ಹಿಂಸಾಚಾರ ಅಥವಾ ಇತರ ಯಾವುದೇ ಅಡಚಣೆಗಳಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಡಿಸೆಂಬರ್ 11, 2023ರಂದು 5 ನ್ಯಾಯಾಧೀಶರ ಸಂವಿಧಾನ ಪೀಠವು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ 2019ರ ಕ್ರಮ ಸಾಂವಿಧಾನಿಕವಾಗಿ ಮಾನ್ಯವಾಗಿದೆ ಎಂದು ಎತ್ತಿ ತೋರಿಸಿತ್ತು.
ಆಗಸ್ಟ್ 5, 2019ರಂದು ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು. ವರದಿಯ ಪ್ರಕಾರ, ಈ ಅರ್ಜಿಯು ಸಂವಿಧಾನದ 370ನೇ ವಿಧಿಯಲ್ಲಿ ವಿಲೇವಾರಿ ಮಾಡಲಾದ ಪ್ರಕರಣದಲ್ಲಿ ವಿವಿಧ ಅರ್ಜಿಯಾಗಿತ್ತು. ಇದರಲ್ಲಿ ಸುಪ್ರೀಂ ಕೋರ್ಟ್ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಎತ್ತಿಹಿಡಿದಿದೆ.
6 ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರವನ್ನು ಒಂದು ರಾಜ್ಯದಿಂದ ಕೇಂದ್ರಾಡಳಿತ ಪ್ರದೇಶಕ್ಕೆ ಇಳಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಆಗಸ್ಟ್ 5 ಅನ್ನು “ಕಪ್ಪು ದಿನ”ವಾಗಿ ಆಚರಿಸಲಿದೆ ಮತ್ತು ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಒತ್ತಾಯಿಸಲು ಧರಣಿ ನಡೆಸಲಿದೆ. ಇದರ ನಡುವೆ ಸೋಮವಾರ ನಡೆದ ಉನ್ನತ ಮಟ್ಟದ ಸಭೆಗಳು ಕೇಂದ್ರವು ಈ ಪ್ರದೇಶದ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು ಎಂಬ ಊಹಾಪೋಹಗಳಿಗೆ ಕಾರಣವಾಯಿತು. ಇಂದು ಬೆಳಿಗ್ಗೆ ಕರೆಯಲಾಗಿದ್ದ ಎನ್ಡಿಎ ಸಂಸತ್ ಸದಸ್ಯರ ಸಭೆ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಭಾನುವಾರದ ಸಭೆಗಳು ಇದಕ್ಕೆ ಪುಷ್ಟಿ ನೀಡಿವೆ.