Saturday, December 20, 2025
Menu

ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹ್ಮದ್

ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದ್ದು, ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್‌ ಖಾನ್ ಹೇಳಿದ್ದಾರೆ.

ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ಪ್ರಸ್ತುತ ವರ್ಷದಿಂದ ರಾಜ್ಯದಲ್ಲಿರುವ 4300 ಉರ್ದು ಶಾಲೆ ಹಾಗೂ ಎಲ್ಲ ಮದರಸಾಗಳಲ್ಲಿ ಕಡ್ಡಾಯವಾಗಿ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಉರ್ದು ಹಾಗೂ ತೃತೀಯ ಭಾಷೆ ಇಂಗ್ಲಿಷ್‌ನ್ನು ಆಯ್ಕೆ ಮಾಡಿಕೊಳ್ಳಲು  ಸೂಚಿಸಲಾಗಿದೆ.  ಈ ಕಾರ್ಯಕ್ರಮವು ಕನ್ನಡ ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ನಡೆಯಲಿದೆ  ಎಂದು ಹೇಳಿದರು.

1973ರಲ್ಲಿ ಅಂದಿನ ಮುಖ್ಯಮಂತ್ರಿ ದೇವರಾಜ್ ಅರಸು ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣ ಮಾಡಿದ್ದಾರೆ. ಕೂಡ್ಲಿಗಿ ತಾಲೂಕಿನ ಓಬಳಶೆಟ್ಟಿಹಳ್ಳಿ ಗ್ರಾಮದ ಗೊಲ್ಲರ ಸೂಲಗಿತ್ತಿ ಈರಮ್ಮ 13 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿರುವ ಹಿನ್ನೆಲೆಯಲ್ಲಿ ಸಮಾಜಸೇವಾ ಕಾರ್ಯ ಮತ್ತು ಹೊಸಪೇಟೆ ನಗರದ ಬಾಣದಕೇರಿ ನಿವಾಸಿ ಬಿ.ಮಾರುತಿ ಅವರಿಗೆ ಚಿತ್ರಕಲೆ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ತುಂಬ ಸಂತಸ ತಂದಿದೆ ಎಂದರು.

ಚುನಾವಣೆ ವೇಳೆ ಘೋಷಿಸಿದಂತೆ ಐದು ಗ್ಯಾರಂಟಿಗಳನ್ನು ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಲ್ಲಿ ಅನುಷ್ಠಾನಕ್ಕೆ ತಂದು ಜನರಿಗೆ ತಲುಪಿಸಿದ್ದೇವೆ. ಆದರೆ ನಾವು ಆರನೇ ಗ್ಯಾರಂಟಿ ಘೋಷಣೆ ಮಾಡಿಲ್ಲ. ಆದರೆ ಬಡಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ 2026 ಅಂತ್ಯದೊಳಗೆ ವಸತಿ ರಹಿತರಿಗೆ ಸೂರು ಕಲ್ಪಿಸಲಾಗುತ್ತದೆ. ಬೆಂಗಳೂರಿನ  ಬಡಜನತೆ ಅನುಕೂಲವಾಗುವ ನಿಟ್ಟಿನಲ್ಲಿ 2016ರಲ್ಲಿ 1023 ಎಕರೆಯನ್ನು ರಾಜೀವ್ ಗಾಂಧಿ ವಸತಿ ಯೋಜನೆಗೆ ನೀಡಿ ಬಡಜನರಿಗೆ ಸ್ವಂತ ನಿವಾಸ ಕಟ್ಟಿಕೊಳ್ಳಲು ಸಹಕಾರ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

Related Posts

Leave a Reply

Your email address will not be published. Required fields are marked *