ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಮರುಕಳಿಸಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಜನದಟ್ಟಣೆ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದೆ.
ಕರ್ನಾಟಕ ಪೊಲೀಸ್ ಇಲಾಖೆಯು ಮಂಗಳವಾರ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ಈ ಮಾರ್ಗಸೂಚಿ ಜಾರಿಗೆ ತರಲಾಗಿದ್ದು, ಯಾವುದೇ ಬಹಳಷ್ಟು ಸಂಖ್ಯೆಯಲ್ಲಿ ಜನ ಸೇರುವ ಸಭೆ ಸಮಾರಂಭಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗಲಿದೆ.
ಹಬ್ಬಗಳು, ಪ್ರತಿಭಟನೆಗಳು, ಮೆರವಣಿಗೆಗಳು ಮತ್ತು ಕ್ರೀಡಾ ಕೂಟಗಳಂತಹ ಬೃಹತ್ ಜನ ಸಮುದಾಯ ಸೇರುವ ಯಾವುದೇ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮಾರ್ಗಸೂಚಿ ಜಾರಿಗೆ ತರಲಾಗಿದೆ.