ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆವರೆಗೂ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರು ಬ್ರಾಂಡೆಡ್ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಸಲಹಾ ಚೀಟಿ ನೀಡುವುದನ್ನು ಸರ್ಕಾರ ನಿಷೇಧಿಸಿದೆ. ಈ ಮೂಲಕ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ತರಹದ ಔಷಧಿಗಳನ್ನು ಹೊರಗೆ ಖರೀದಿಸುವಂತೆ ಶಿಫಾರಸು ಮಾಡದಂತೆ ನೋಡಿಕೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನಲ್ಲಿನ ಜನ ಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವಿರುದ್ಧವಾಗಿದೆ. ಈ ಕಾರಣದಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಭಾರತೀಯ ಔಷಧ ಮಂಡಳಿಯು(ಬಿಪಿಪಿಐ) ಜನೌಷಧ ಕೇಂದ್ರಗಳಿಗೆ ನೋಡಲ್ ಸಂಸ್ಥೆಯಾಗಿದೆ. ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತತ್ತಿರುವ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಲು ಒಪ್ಪಂದದ ನಿಯಮಗಳ ಅನುಸಾರ ಕ್ರಮಕೈಗೊಳ್ಳಬೇಕು ಎಂದು ಹೇಳಲಾಗಿದೆ. ಪರಿಶೀಲನೆ ಹಂತದಲ್ಲಿ ಇರುವ 31 ಜನ ಔಷಧ ಕೇಂದ್ರಗಳ ಅರ್ಜಿಗಳಿಗೆ ಅನುಮತಿ ನೀಡದಂತೆ ಆರೋಗ್ಯ ಇಲಾಖೆಗೆ ಸರ್ಕಾರ ಸೂಚನೆ ನೀಡಿತ್ತು. ಇದಕ್ಕೆ ಹೈಕೋರ್ಟ್ ತಡೆ ನೀಡಿದೆ.