ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು.ತುಮಕೂರು ನಗರದ ಎಂಪ್ರೆಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಪೊಲೀಸ್ ಸಿಬ್ಬಂದಿಗಳ ಪೀಕ್ ಕ್ಯಾಪ್ ಪರಿಚಯ ಮತ್ತು ವಿತರಣೆ ಹಾಗೂ ಮನೆಮನೆಗೆ ಪೊಲೀಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಾರ್ವಜನಿಕರ ಅನುಕೂಲಕ್ಕಾಗಿ ಅಭಿವೃದ್ಧಿಪಡಿಸಿರುವ ‘ಮಹಿಳಾ ಸುರಕ್ಷತಾ ಆ್ಯಪ್’ ಬಿಡುಗಡೆಗೊಳಿಸಿ ಮಾತನಾಡಿದರು.
ಪೀಕ್ ಕ್ಯಾಪ್ ವಿತರಣೆಯಿಂದ ಇಡೀ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಹೊಸ ಚೈತನ್ಯ ಮೂಡಿದೆ. ಪೊಲೀಸರ ವೃತ್ತಿಪರ ಜೀವನದಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಪಿಕ್ ಕ್ಯಾಪ್ ನೀಡುವ ವಿಷಯ ಬಹಳ ದಿನಗಳ ಬೇಡಿಕೆಯಿತ್ತು, ಈ ಬಾರಿ ಅದನ್ನು ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆ ವೃತ್ತಿಯಲ್ಲಿ ಸಾರ್ವಜನಿಕರಿಗೆ ಒಳಿತನ್ನು ಮಾಡುವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಪ್ರತಿ ಕಾನ್ಸ್‌ಟೇಬಲ್‌ಗೂ ಸೈಬರ್ ಕ್ರೈಮ್ ತರಬೇತಿ ನೀಡಿ, ಸೈಬರ್ ಅಪರಾಧ ತಡೆಗಟ್ಟುವಲ್ಲಿ ಕರ್ನಾಟಕ ಎಲ್ಲ ರಾಜ್ಯಗಳಿಗೂ ಮಾದರಿಯಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದರು.
ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ರವರು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಸಿ.ಬಿ.ಸುರೇಶ್ ಬಾಬು, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅರುಣ್ ಚಕ್ರವರ್ತಿ, ಕೇಂದ್ರ ವಲಯ ಐಜಿಪಿ ಲಾಭೂ ರಾಮ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಮುಂತಾದವರು ಇದ್ದರು.


