ಕೆಪಿಎಸ್ಸಿ ಪಶು ವೈದ್ಯಾಧುಇಕಾರಿಗಳ ನೇಮಕದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇಂದು ವಿಚಾರಣೆಗಾಗಿ ಸಿಐಡಿ ಕಚೇರಿಗೆ ಹಾಜರಾಗಿದ್ದಾರೆ.
ಗುರುವಾರ ವಿಚಾರಣೆಗೆ ಹಾಜರಾಗಬೇಕಿತ್ತು, ಆದರೆ ಅವರು ಹಾಜರಾಗಿರಲಿಲ್ಲ, ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಅಕ್ರಮ ನಡೆದಿರುವ ಆರೋಪದಡಿ ಪ್ರಕರಣದ ತನಿಕೆಯನ್ನು ಸಿಐಡಿ ನಡೆಸುತ್ತಿದೆ. ಹಿಂದೆ ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯ ನಿರ್ವಹಿಸಿದ್ದ ಜ್ಞಾನೇಂದ್ರ ಕುಮಾರ್ ಅವರ ಅವಧಿಯಲ್ಲಿ ಈ ನೇಮಕ ಪ್ರಕ್ರಿಯೆ ನಡೆದಿತ್ತು.
ಪ್ರಕರಣದ ತನಿಖೆಯ ಭಾಗವಾಗಿ ಅವರಿಂದ ಮಾಹಿತಿ ಸಂಗ್ರಹಿಸಲು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದಾರೆ. ನೇಮಕ ಪ್ರಕ್ರಿಯೆಯಲ್ಲಿ ಅವರ ಪಾತ್ರ, ಪರೀಕ್ಷಾ ಪ್ರಕ್ರಿಯೆ, ಫಲಿತಾಂಶ ಹಾಗೂ ಸಂಬಂಧಿತ ಆಡಳಿತಾತ್ಮಕ ಕ್ರಮಗಳ ಕುರಿತು ಸಿಐಡಿ ಅಧಿಕಾರಿಗಳು ಪ್ರಶ್ನಿಸುವ ಸಾಧ್ಯತೆಯಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಸಿಐಡಿ ಮಾಹಿತಿ ಸಂಗ್ರಹಿಸುತ್ತಿದೆ. ಅಧಿಕಾರಿಯಿಂದ ಪಡೆಯುವ ಮಾಹಿತಿಯನ್ನು ಈಗಾಗಲೇ ಸಿಐಡಿ ಸಂಗ್ರಹಿಸಿರುವ ದಾಖಲೆಗಳು ಮತ್ತು ಇತರ ಸಾಕ್ಷ್ಯಗಳೊಂದಿಗೆ ಪರಿಶೀಲಿಸುವ ಸಾಧ್ಯತೆ ಇದೆ.


