ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಉಚಿತ ಗ್ಯಾರಂಟಿ ಘೋಷಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗ್ಯಾರಂಟಿ ಘೋಷಣೆಯ ಪ್ರಮುಖರು. ಗ್ಯಾರಂಟಿ ಘೋಷಣೆ ಮಾಡಿ ತೆರಿಗೆ ದುಡ್ಡಲ್ಲಿ ಜನರಿಗೆ ಭಾಗ್ಯಗಳನ್ನು ಕೊಡುತ್ತಿದ್ದಾರೆ ಎಂದು ಹೈಕೋರ್ಟ್‌ನಲ್ಲಿ ಚುನಾವಣಾ ಮನವಿ ಸಲ್ಲಿಕೆ ಮಾಡಿದ್ದೆವು ಎಂದು ಮಾಹಿತಿ ನೀಡಿದರು.
ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ, ಮನವಿ ವಜಾ ಮಾಡಿ ತೀರ್ಪು ನೀಡಿದ್ದರು. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆವು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮುಖ್ಯಮಂತ್ರಿ ಮಾಡಿರುವುದು ಅಪರಾಧ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದೆ.
ಅತೀ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ, ಎರಡು ವಾರದಲ್ಲಿ ಮುಖ್ಯಮಂತ್ರಿ ಸುಪ್ರೀಂಕೋರ್ಟ್‌ಗೆ ಹಾಜರಾಗಬೇಕಿದೆ ಎಂದು ಹೇಳಿದರು.


