ಇಂಫಾಲ (ಮಣಿಪುರ): 2023ರಲ್ಲಿ ಜನಾಂಗೀಯ ಹಿಂಸಾಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿದ್ದಾರೆ.
ಶನಿವಾರ ಬೆಳಿಗ್ಗೆ ಇಂಫಾಲಕ್ಕೆ ಬಂದಿಳಿದ ಅವರನ್ನು, ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಮತ್ತು ಮುಖ್ಯ ಕಾರ್ಯದರ್ಶಿ ಪುನೀತ್ ಕುಮಾರ್ ಗೋಯೆಲ್ ಸ್ವಾಗತಿಸಿದರು.
ರಾಜ್ಯದಲ್ಲಿ 8,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ ನಂತರ ಚುರಾಚಂದಪುರ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು.
ಈಶಾನ್ಯ ರಾಜ್ಯಗಳು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ ಕಾಲ ಸನ್ನಿಹಿತವಾಗಿದ್ದು, ಎರಡೂ ಗುಂಪುಗಳು ರಾಜ್ಯದಲ್ಲಿ ಶಾಂತಿ ಕಾಪಾಡಲು ಶ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಪ್ರಧಾನಿ ಕಚೇರಿಯು, ಮಣಿಪುರದ ಸಮಗ್ರ, ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿಯ ಬದ್ಧತೆಗೆ ಅನುಗುಣವಾಗಿ ಚುರಾಚಂದ್‌ಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಅಡಿಪಾಯ ಹಾಕಲಿದ್ದಾರೆ ಎಂದು ತಿಳಿಸಲಾಗಿತ್ತು. ಇದಾದ ಬಳಿಕ ಪ್ರಧಾನಿ ಇಂಫಾಲದಲ್ಲಿ 1,200 ಕೋಟಿಯ ಯೋಜನೆಗೆ ಚಾಲನೆ ನೀಡಿದರು.
ರಾಜ್ಯದಲ್ಲಿ 2023ರಿಂದ ಮೈಥೇಯಿ ಮತ್ತು ಕುಕಿ ಗುಂಪುಗಳ ನಡುವೆ ಜನಾಂಗೀಯ ಸಂಘರ್ಷಕ್ಕೆ ಒಳಗಾಗಿದ್ದು, 260 ಜನರು ಮೃತಪಟ್ಟಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇದುವರೆಗೂ ಪ್ರಧಾನಿ ಭೇಟಿ ನೀಡಿ ಸಾಂತ್ವನ ಹೇಳಿರಲಿಲ್ಲ. ಇದೀಗ ಸುಮಾರು 2 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.