Tuesday, November 11, 2025
Menu

ಜೈಲಿನಲ್ಲಿ  ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮವೆಂದ ಸಿಎಂ 

ಪರಪ್ಪನ ಅಗ್ರಹಾರ  ಜೈಲಿನಲ್ಲಿ  ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಇಂದು ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಹರಪ್ಪನಹಳ್ಳಿ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂಬ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,  ಆರ್.ಎಸ್.ಎಸ್. ನ್ನು ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಎಂದರು. ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು.

ನ್ಯಾಯಾಲಯದ ಆದೇಶದ ಮೇರೆಗೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲಾಗುವುದು ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ಸೂಚಿಸಲಾಗುವುದೋ ಆಗ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ಸರ್ಕಾರದ ತೀರ್ಮಾನಕ್ಕೆ ಸಕ್ಕರೆ ಮಾಲೀಕರು ಬದ್ಧರಾಗುವ ಭರವಸೆ ಇದೆ. ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರದ ತೀರ್ಮಾನದ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರ ಸಮ್ಮುಖದಲ್ಲಿಯೇ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ ಎಂದರು.

ಬಸನಗೌಡ ಪಾಟೀಲ ಯತ್ನಾಳ್ ಅವರು ಸಹ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರೈತರಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರ ನೀಡಿದ ಅವರು ಅತಿವೃಷ್ಟಿಯಿಂದ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರೈತರಿಗೆ ಪರಿಹಾರ ನೀಡಲಾಗುವುದು ಎಂದರು.

ವಾಲ್ಮೀಕಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ: ಪರಿಗಣಿಸಲಾಗುವುದು. ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ಬಗ್ಗೆ ಮಾತನಾಡಿ ಸಚಿವ ಸಂಪುಟ ಪುನರ್ ರಚನೆಯಾದಾಗ ಪರಿಗಣಿಸಲಾಗುವುದು ಎಂದು ಮಾಹಿತಿ ನೀಡಿದರು.

Related Posts

Leave a Reply

Your email address will not be published. Required fields are marked *