ಮಂಗಳೂರಿನ ಬಜ್ಪೆ ಕಿನ್ನಿಪದವು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸುಹಾಸ್ ಶೆಟ್ಟಿ ಎಂಬವರನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಕೊಲೆಯಾಗಿರುವ ಸುಹಾಸ್ ಶೆಟ್ಟಿ ಹಿಂದೂ ಕಾರ್ಯಕರ್ತ ಎನ್ನಲಾಗಿದ್ದು, ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಮಂಗಳೂರು ಬಂದ್‌ಗೆ ಕರೆ ನೀಡಿದ್ದು, ಮುಂಜಾಗ್ರತೆ ಕ್ರಮವಾಗಿ ಮೇ ಆರರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೊಲೆಯಾದ ಸುಹಾಸ್ ಶೆಟ್ಟಿ ರೌಡಿಶೀಟರ್ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಸುರತ್ಕಲ್ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿದ್ದ ಎಂದು ತಿಳಿದು ಬಂದಿದೆ.
ಸುಹಾಸ್ ಶೆಟ್ಟಿ ಅವರನ್ನು ತಂಡವೊಂದು ಏಕಾಏಕಿ ದಾಳಿ ಮಾಡಿ ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸುತ್ತಿರುವ ವೀಡಿಯೊ ವೈರಲ್ ಆಗಿದೆ.
ಸುಹಾಸ್ ಶೆಟ್ಟಿ ವಿರುದ್ಧ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.
ಸುಹಾಸ್ ಶೆಟ್ಟಿ ಕೊಲೆ ನಡೆದ ಹಿನ್ನೆಲೆಯಲ್ಲಿ, ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಲು ಮೇ 2 ರಿಂದ 6 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿ ಇರುವಾಗ ಪ್ರತಿಭಟನೆಗೆ ನಿಷೇಧ ಹಾಕಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವುದಕ್ಕೆ ನಿಷೇಧ ವಿಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ನೀಡಿದ ಕರೆಯಂತೆ ನಗರದಲ್ಲಿ ಖಾಸಗಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿವೆ. ಅಂಗಡಿ ಮುಂಗಟ್ಟು ಬಹುತೇಕ ಮುಚ್ಚಲಾಗಿದೆ. ಬೆಳಿಗ್ಗೆ ಕೆಲ ಅಂಗಡಿ, ಹೋಟೆಲ್ ಗಳು ತೆರೆದಿದ್ದವು, ಅವುಗಳನ್ನು ಕೂಡ ಬಂದ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕಮಿಷನರ್ ಅಗ್ರವಾಲ್ ಅವರು ಆದೇಶ ಹೊರಡಿಸಿದ್ದಾರೆ. ಕೆಲವು ಖಾಸಗಿ ವಾಹನಗಳು ಸಂಚಾರ ಮಾಡುತ್ತಿವೆ ಆದರೂ, ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿವೆ. ಬಹುತೇಕ ಬಂದ್ ವಾತಾವರಣ ನಿರ್ಮಾಣ ಆಗಿದೆ.
ನಗರ ಸೇರಿದಂತೆ ಎಲ್ಲ ಕಡೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ಘಟನೆ ಕುರಿತು ಹದ್ದಿನ ಕಣ್ಣು ಇಟ್ಟಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಅಲ್ಲಲ್ಲಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರಯಾಣಿಕರು ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣ ಆಗಿದೆ.
ಆಘಾತಕಾರಿ ಕೃತ್ಯ ಎಂದ ಸಚಿವ ದಿನೇಶ ಗುಂಡೂರಾವ್: ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಆಘಾತಕಾರಿ. ಈ ಘಟನೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ, ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ. ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ, ಯಾರ ತುಷ್ಠೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಗೆ ಒಂದು ಮಾತು. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಮ್ಮದು ಕೂಡ ಇದೆ. ದ್ವೇಷ ಹರಡುವ ಮೂಲಕ, ಪ್ರಚೋದಿಸುವ ಮೂಲಕ ಮಂಗಳೂರಿನಲ್ಲಿ ಶಾಂತಿ ಭಂಗ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ. ಜವಾಬ್ದಾರಿಯಿಂದ ವರ್ತಿಸಿ. ಕೊಲೆಯಾದ ಸುಹಾಸ್ ಕುಟುಂಬಕ್ಕೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ನಾವು ಕೇವಲ ಬಾಯಿ ಮಾತಿನಲ್ಲಿ ಕಠಿಣ ಕ್ರಮದ ಭರವಸೆ ನೀಡುವವರಲ್ಲ. ಬದಲಿಗೆ ಕಾನೂನಿನ ಅನುಸಾರ ಈ ಕೃತ್ಯ ಎಸಗಿದವರಿಗೆ ತಕ್ಕ ಪಾಠ ಕಲಿಸುವವರು. ಇದು ನಿಶ್ಚಿತ ಎಂದು ತಿಳಿಸಿದ್ದಾರೆ.
ದುಷ್ಕರ್ಮಿಗಳ ಪತ್ತೆಗೆ ಸ್ಪೀಕರ್ ಖಾದರ್ ಸೂಚನೆ: ಬಜ್ಪೆ ಕೊಲೆ ಪ್ರಕರಣ, ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿ, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.