Menu

ಹಲವು ವಿಷಯ ಚರ್ಚೆ ಆಗಬೇಕಿದೆ, ಅಧಿವೇಶನ ಒಂದು ವಾರ ವಿಸ್ತರಿಸಿ: ಸ್ಪೀಕರ್‌ಗೆ ಆರ್‌ ಅಶೋಕ ಮನವಿ

R Ashoka

ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ. ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರಿಗೆ ಇನ್ನೂ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ. ಕರ್ನಾಟಕ ದಾದ್ಯಂತ ಪಡಿತರ ಚೀಟಿಗಾಗಿ ಸಲ್ಲಿಸಿರುವ 3.22 ಲಕ್ಷಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ಅವುಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮತ್ತು ಬೆಂಗಳೂರಿನಿಂದ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಆದ್ದರಿಂದ ಅಧಿವೇಶನವನ್ನು ಒಂದು ವಾರ ವಿಸ್ತರಿಸುವ ಬಗ್ಗೆ ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *