ಮೈಸೂರು: ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವುದು ಇವರ್ಯಾರ ಕೈಯಲ್ಲೂ ಆಗಲ್. ಅದು ದೇವೇಗೌಡರ ಕುಟುಂಬದಿಂದ ಮಾತ್ರ ಸಾಧ್ಯ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ಆಡಳಿತಾರೂಢ ಮಿತ್ರ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ಹಾಗೆ ಮಾಡಿದರೆ, ನಾನು ಐದೇ ನಿಮಿಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದರು.
ಈ ಹಿಂದೆ ನಾನು ಮೇಕೆದಾಟು ಯೋಜನೆಗೆ ಪ್ರಧಾನಿಯಿಂದ 5 ನಿಮಿಷದಲ್ಲಿ ಅನುಮತಿ ಕೊಡಿಸುತ್ತೇನೆ ಎಂಬ ಹಳೆಯ ಮಾತಿಗೆ ನಾನು ಈಗಲೂ ಬದ್ಧ. ಕಾಂಗ್ರೆಸ್ ಪಕ್ಷದವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಾದರೆ ಅದು ಸಾಧ್ಯವಾಗುತ್ತದೆ. ಕಾಂಗ್ರೆಸ್ ಕೈಯಲ್ಲಿ ಅದು ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.
ತಮಿಳುನಾಡು ಸರ್ಕಾರವನ್ನು ಒಪ್ಪಿಸದೆ ಮೇಕೆದಾಟು ಯೋಜನೆಯ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ನವರೇ ವಿನಹ ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಜನರಿಗೆ ಭರವಸೆ ನೀಡಿದವರು ಮಾಡಬೇಕು ತಾನೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಮೇಕೆದಾಟು ಯೋಜನೆ ಹೆಸರು ಹೇಳಿಕೊಂಡು ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.