ವಸತಿ ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ಜಮೀರ್ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಪತ್ತೆಯಾಗಿರುವ ಸಾಲ ನೀಡಿದ ವ್ಯಕ್ತಿಗಳ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ದಶಕದ ಹಿಂದೆ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ರಾಧಿಕಾ ಹೇಳಿಕೆ ದಾಖಲಿಸಿದ್ದಾರೆ. 2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಜಮೀರ್ ಖಾನ್ ಅವರ ಮೇಲೆ ಇಡಿ ದಾಳಿ ನಡೆಸಿತ್ತು. ಇಡಿ ವರದಿ ಅನ್ವಯ ಜಮೀರ್ ಖಾನ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಭ್ರಷ್ಟಾಚಾರ ನಿಗ್ರಹ ದಳವು ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆ ಲೋಕಾಯುಕ್ತ ಪೊಲೀಸರಿಗೆ ವಹಿಸಲಾಗಿತ್ತು, ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ. ಸಾಲ ನೀಡಿದ್ದೆ ಎಂದು ರಾಧಿಕಾ ವಿಚಾರಣೆ ವೇಳೆ ತಿಳಿಸಿದ್ದಾರೆ ಎನ್ನಲಾಗಿದೆ.