ಬೆಂಗಳೂರು: ರಾಜ್ಯಾದ್ಯಂತ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಹೆಚ್ಚುವರಿ ತಜ್ಞರ ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಶಾಸಕರು, ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಮಲೆನಾಡು ಹಾಗೂ ಅರೆ ಮಲೆನಾಡು ಜಿಲ್ಲೆಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಜನತೆ ಆತಂಕಗೊಂಡಿದ್ದು, ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆಗಾಗಿ ಮೈಸೂರಿನ ಜಯದೇವ ದ್ರೋಗ ಸಂಸ್ಥೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತಿದ್ದಾರೆ.
ಈ ಆಸ್ಪತ್ರೆಗೆ ಇತರೆ ಜಿಲ್ಲೆಗಳಿಂದ ತುರ್ತಾಗಿ ತಜ್ಞ ವೈದ್ಯರನ್ನು ನಿಯೋಜನೆ ಮಾಡುವ ಕುರಿತು ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ, 30 ರಿಂದ 50 ವರ್ಷ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಮತ್ತು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ರೋಗಿಗಳ ಸಂಖ್ಯೆ ಸಾಮರ್ಥ್ಯಕ್ಕಿಂತ ದುಪ್ಪಟ್ಟಾಗಿರುವ (ದಿನಕ್ಕೆ 700ರ ಬದಲಿಗೆ 1500-2000) ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ ಮಾಡಬೇಕಿದೆ ಎಂದು ಆಗ್ರಹಿಸಿದರು.
ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಾಥಮಿಕ ತಪಾಸಣೆ ವ್ಯವಸ್ಥೆ, ಹೃದಯಾಘಾತದ ಕಾರಣಗಳ ಕುರಿತು ಸಮಗ್ರ ಅಧ್ಯಯನ, ಜನಜಾಗೃತಿ ಮತ್ತು ಆರೋಗ್ಯ ಮೂಲಸೌಕರ್ಯ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳನ್ನು ಪ್ರಸ್ತಾಪಿಸಿ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ಪತ್ರದಲ್ಲಿ ಒತ್ತಾಯಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿದ್ದಾರೆ.