ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಹವಾಮಾನ ಇಲಾಖೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮುಂತಾದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ 40-50ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಾಲಾ-ಕಾಲೇಜುಗಳಿಗೆ ಇಂದು ರಜೆ
ಮಂಗಳೂರು ತಾಲೂಕಿನಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ನದಿ, ಸಮುದ್ರ ತೀರ ಪ್ರದೇಶಕ್ಕೆ ತೆರಳದಂತೆ, ಮೀನುಗಾರರಿಗೆ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.