ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿಯಲ್ಲಿ ಮಹಿಳೆಯೊಬ್ಬರು 14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಸಾಯಿಸಿದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
40 ವರ್ಷದ ಸುವರ್ಣ ಆತ್ಮಹತ್ಯೆ ಮಾಡಿಕೊಂಡವರು, 14 ವರ್ಷದ ಮಗಳು ಕಾರುಣ್ಯ ಕೊಲೆಯಾದವಳು. ಸುವರ್ಣ ಮೊದಲು ಮಗಳು ಕಾರುಣ್ಯಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಮಗಳು ಮೃತಪಟ್ಟಿದ್ದಾಳೆ ಎಂದು ಖಚಿತಪಡಿಸಿಕೊಂಡ ಬಳಿಕ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶನಿವಾರ ಮನೆಯ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಮತ್ತು ದೀರ್ಘಕಾಲದವರೆಗೆ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ನೆರೆಹೊರೆಯವರು ಮತ್ತು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವೈಟ್‌ಫೀಲ್ಡ್ ಪೊಲೀಸರು ಬಾಗಿಲು ಮುರಿದು ಒಳಪ್ರವೇಶಿಸಿದಾಗ ತಾಯಿ-ಮಗಳ ಮೃತದೇಹಗಳು ಪತ್ತೆಯಾಗಿವೆ. ಆತ್ಮಹತ್ಯೆ ಮತ್ತು ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕುಟುಂಬದಲ್ಲಿನ ಆಂತರಿಕ ಕಲಹ, ಆರ್ಥಿಕ ಸಂಕಷ್ಟ ಅಥವಾ ಮಾನಸಿಕ ಒತ್ತಡ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಫ್‌ಎಸ್‌ಎಲ್ ತಂಡ ಆಗಮಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕುಟುಂಬದ ಸದಸ್ಯರ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಸುವರ್ಣ ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.


