Menu

MUDA: ಇಡಿಯಿಂದ 100 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 100 ಕೋಟಿ ರೂ. ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ. ಲೋಕಾ ಯುಕ್ತ ಪೊಲೀಸರು ದಾಖಲಿಸಿದ್ದ ಎಫ್​​ಐಆರ್​​ ಆಧರಿಸಿ ಆಸ್ತಿ ಜಪ್ತಿ ಮಾಡಲಾಗಿದ್ದು, ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ಹೊರಡಿಸಿರುವ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಐಪಿಸಿ 1860 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ವಿವಿಧ ಸೆಕ್ಷನ್‌ಗಳ ಅಡಿ ಲೋಕಾಯುಕ್ತ ಪೊಲೀಸರು ಮೈಸೂರಿನಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ಕೈಗೊಂಡಿತ್ತು.

ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಆರೋಪ ಕೇಳಿಬಂದಿತ್ತು. ನಗದು, ಬ್ಯಾಂಕ್ ವರ್ಗಾವಣೆ, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮ ಹಂಚಿಕೆ ಮಾಡಲು ಲಂಚ ಪಡೆದಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತನಿಖೆಯ ಸಮಯದಲ್ಲಿ ಸಂಗ್ರಹಿಸಲಾಗಿದೆ ಎಂದು ಇಡಿ ತಿಳಿಸಿದೆ.

Related Posts

Leave a Reply

Your email address will not be published. Required fields are marked *