ಬಂಟ್ವಾಳದ ಕೂರಿಯಾಳ ಸಮೀಪ ಇರಾಕೋಡಿ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಯಾನೆ ರಹೀಂ (34) ಎಂಬ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಮುಸ್ಲಿಮರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಮೇ 30ರ ಸಂಜೆ 6ಗಂಟೆವರೆಗೂ ಮಂಗಳೂರು ಕಮೀಷನರೇಟ್ ಹಾಗು ಮಂಗಳೂರು ಪೊಲೀಸ್ ವ್ಯಾಪ್ತಿಯಡಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದು ಭದ್ರತೆ ಪರಿಶೀಲಿಸಲಿದ್ದಾರೆ. ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಹತ್ಯೆ ನಡೆದು ತಿಂಗಳು ಕಳೆಯುವ ಮೊದಲೇ ಮುಸ್ಲಿಂ ಯುವಕನ ಹತ್ಯೆಯಾಗಿದೆ.
ಪಿಕಪ್ ವಾಹನ ಹೊಂದಿದ್ದ ಅಬ್ದುಲ್ ರಹೀಂ ಬಳಿ ಒಂದು ಲೋಡ್ ಮರಳು ಬೇಕೆಂದು ದುಷ್ಕರ್ಮಿಗಳು ಕುರಿಯಾಳದ ಇರಾಕೋಡಿಗೆ ಕರೆಸಿಕೊಂಡಿದ್ದಾರೆ. ಮರಳು ಇಳಿಸಿದ ತಕ್ಷಣ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಬ್ದುಲ್ ರಹೀಂ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ. ರಹೀಂ ಜೊತೆಗಿದ್ದ ಕಲಂಧರ್ ಶಾಫಿ ಎಂಬವರಿಗೂ ಹಲ್ಲೆ ನಡೆಸಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದಲೇ ಇದೀಗ ಮುಸ್ಲಿಂ ಯುವಕನ ಹತ್ಯೆಯಾಗಿದೆ ಎಂದು ಜನ ಆಸ್ಪತ್ರೆಯ ಮುಂದೆ ಪ್ರತಿಭಟನೆ ಮಾಡಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಪಿಕಪ್ ವಾಹನದಲ್ಲಿ ಬಾಡಿಗೆ ಮಾಡಿ ಜೀವನ ಸಾಗಿಸುತ್ತಿದ್ದು ಸ್ಥಳೀಯ ಮಸೀದಿಯ ಕಾರ್ಯದರ್ಶಿಯಾಗಿದ್ದರು. ಪತ್ನಿ ಹಾಗೂ ಎರಡು ಮಕ್ಕಳು ಇರುವ ರಹೀಂ ಯಾವುದೇ ಕೃತ್ಯಗಳಲ್ಲೂ ಭಾಗಿಯಾಗಿಲ್ಲ, ಯಾವುದೇ ಸಂಘಟನೆಗಳಲ್ಲೂ ಗುರುತಿಸಿಕೊಂಡಿಲ್ಲ. ಈ ಹತ್ಯೆ ಹಿಂದೆ ಇರುವ ಎಲ್ಲರನ್ನೂ ತಕ್ಷಣ ಬಂಧಿಸಬೇಕೆಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಆಗ್ರಹಿಸಿದ್ದಾರೆ.