Thursday, November 20, 2025
Menu

ಚಾಮರಾಜನಗರಕ್ಕೆ ಬಂದಿರುವ ನನ್ನ ಅಧಿಕಾರ ಭವಿಷ್ಯದಲ್ಲಿಯೂ ಭದ್ರ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ  ಸಿಎಂ  ಮಾತನಾಡಿದರು.  ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ.  ಮೂಢನಂಬಿಕೆ ಮತ್ತು ಕಂದಾಚಾರ ನಂಬುವು ದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢ ನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು.

2028 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ

ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಡಿಕೆಶಿವಕುಮಾರ್  ಸಿಎಂ ಆಗುವ ಬಗ್ಗೆ ನೀಡಿರುವ  ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ,  ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರು ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು  ಹೇಳಿದರು.

ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ , ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.

2028 ರಲ್ಲಿಯೂ ಸಿದ್ದರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವೆಗೆ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಬಗ್ಗೆ ವಿವರಗಳನ್ನು ಕೇಳಲಾಗಿ, ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು , ಕಾರ್ಖಾನೆ ಮಾಲಿಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ ಗೆ ( ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದರು.

Related Posts

Leave a Reply

Your email address will not be published. Required fields are marked *