Menu

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್: ಸಚಿವ ಈಶ್ವರ್ ಖಂಡ್ರೆ ಸೂಚನೆ

eshwar khandre

ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (35) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದು, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಹುಲಿ ದಾಳಿಯ ನಂತರ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ  ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದರ ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ ಮತ್ತೊಂದು ದಾರುಣ ಘಟನೆ ಸಂಭವಿಸಿರುವುದು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *