Thursday, October 09, 2025
Menu

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ ಇಲ್ಲ: ಸಚಿವ ಶಿವರಾಜ ತಂಗಡಗಿ

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.

೭೦ ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿದೆ. ಈ ವರ್ಷ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣೆಗೆಗಳನ್ನು ಒಳಗೊಂಡಿರಲಿದೆ.

ಕಳೆದ ವರ್ಷ 69 ಪ್ರಶಸ್ತಿಗಳಿಗೆ 2,000 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿತ್ತು. ಆನ್‌ಲೈನ್‌ ಮೂಲಕ 1,135ಕ್ಕೂ ಹೆಚ್ಚು ಹಾಗೂ ಭೌತಿಕವಾಗಿ 85ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. 2022ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಸುನಿಲ್ ಕುಮಾರ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಘೋಷಿಸಿದ್ದರು. 2023ರಲ್ಲಿ ಕಾಂಗ್ರೆಸ್‌ ಸರ್ಕಾರ ಈ ಪ್ರಕ್ರಿಯೆಯನ್ನು ನಿಲ್ಲಿಸಿತ್ತು.

Related Posts

Leave a Reply

Your email address will not be published. Required fields are marked *