ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಟಗಾರರ ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡಿಲ್ಲ ಎಂದರು.
ಇದೇ ವೇಳೆ ರಾಜ್ಯ ಸರ್ಕಾರದಿಂದ ಆರ್ ಸಿಬಿ ಆಟಗಾರರನ್ನು ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಸನ್ಮಾನಿಸಲಿದೆ. ಆರ್ ಸಿಬಿ ತಂಡದ ಒಬ್ಬ ಆಟಗಾರನಿಗೆ ಮಾತನಾಡಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.
18 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಆರ್ ಸಿಬಿ ತಂಡದ ಆಟಗಾರರಿಗೆ ರಾಜ್ಯ ಸರ್ಕಾರದಿಂದಲೇ ಅಭಿನಂದನೆ ಸಲ್ಲಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ವಿಧಾನಸೌಧದವರೆಗೆ ಆಟಗಾರರು ಬಸ್ ನಲ್ಲಿ ಬಂದ ನಂತರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಲಿದ್ದು, ಅಲ್ಲಿ ಕೆಎಸ್ ಸಿಎ ವತಿಯಿಂದ ಸನ್ಮಾನ ಸಮಾರಂಭ ನಡೆಯಲಿದ್ದು, ಪಾಸ್ ಪಡೆದ ಅಭಿಮಾನಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಅಭಿಮಾನಿಗಳು ವಿಧಾನಸೌಧಕ್ಕೆ ಪ್ರವೇಶವಿಲ್ಲ.