ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ ದಾಳಿ ನಡೆದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಐದು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರಿಗೆ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸುವಂತೆ ಸೂಚಿಸಿದೆ.
ಉಗ್ರರ ನೆಲಗಳ ಮೇಲೆ ಭಾರತದ ವಾಯುಪಡೆಯ ದಾಳಿ ಬಳಿಕ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರದ ಸೂಚನೆಯಂತೆ ವಿವಿಧ ರಾಜ್ಯಗಳಲ್ಲಿ ವಿಮಾನ ಸಂಚಾರವನ್ನು ರದ್ದು ಮಾಡಲಾಗಿದೆ. ಬೆಂಗಳೂರಿನಿಂದ ಜಮ್ಮು-ಕಾಶ್ಮೀರ, ರಾಜಸ್ಥಾನದ ಜೋಧ್‌ಪುರ್, ಉತ್ತರ ಪ್ರದೇಶದ ಅಯೋಧ್ಯೆ, ಲಖನೌ, ಘಾಜಿಯಾಬಾದ್‌ಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ. “ಕೆಲವು ವಾಯುಯಾನ ಪ್ರದೇಶಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಜಾರಿಯಲ್ಲಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ, ವಿಮಾನಯಾನ ಸಂಸ್ಥೆಗಳ ಜೊತೆಗೆ ವೇಳಾಪಟ್ಟಿಯನ್ನು ಪರಿಶೀಲಿಸಿ,” ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಎಕ್ಸ್‌ನಲ್ಲಿ ವಿನಂತಿಸಿದೆ. ವಿಮಾನಯಾನ ಸಂಸ್ಥೆಗಳ ಅಧಿಕೃತ ಎಕ್ಸ್ ಖಾತೆಗಳ ಮೂಲಕ ವೇಳಾಪಟ್ಟಿಯ ಬದಲಾವಣೆಗಳ ಮಾಹಿತಿಯನ್ನು ಪಡೆಯಬಹುದು ಎಂದು ತಿಳಿಸಿದೆ.
ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಮಂಗಳೂರು ವಿಮಾನ ನಿಲ್ದಾಣದ ಆಡಳಿತವು ಪ್ರಯಾಣಿಕರಿಗೆ, ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಯಾಣಿಕರಿಗೆ ಉಂಟಾಗಿರುವ ಅನಾನುಕೂಲತೆಗೆ ವಿಮಾನ ನಿಲ್ದಾಣಗಳು ಕ್ಷಮೆ ಯಾಚಿಸಿವೆ.