ಸಂಸತ್ ಬಜೆಟ್ ಅಧಿವೇಶನ ಇಂದು ಆರಂಭಗೊಳ್ಳುತ್ತಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಬಜೆಟ್ ಅಧಿವೇಶನವು ಜನವರಿ 28ರಿಂದ ಫೆಬ್ರವರಿ 13 ಮತ್ತು ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ.
ಫೆಬ್ರವರಿ ಒಂದರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನ ಆರಂಭಕ್ಕೂ ಮೊದಲು ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಿತು.
ಅಧಿವೇಶನದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಕಾಯ್ದೆ, ವಿಶೇಷ ತೀವ್ರ ಪರಿಷ್ಕರಣೆ ಮತ್ತು ಪರಿಸರ ಸಮಸ್ಯೆ ಸೇರಿದಂತೆ ಹಲವು ವಿಷಯಗಳನ್ನು ಪ್ರಮುಖ ಚರ್ಚೆಯಾಗಿ ಕೈಗೆತ್ತಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಸಂಸದೀಯ ಕಾರ್ಯತಂತ್ರ ಗುಂಪು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿ ಮಂಗಳವಾರ ಸಭೆ ನಡೆಸಿದೆ. ವಿಬಿ ಜಿ ರಾಮ್ ಜಿ ಕಾಯ್ದೆ ಮತ್ತು ನಡೆಯುತ್ತಿರುವ ಎಸ್ಐಆರ್ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಗಿದೆ.
ಸಂಸತ್ತಿನಲ್ಲಿ ಮುಂಬರುವ ಬಜೆಟ್ ಅಧಿವೇಶನಕ್ಕಾಗಿ ಜಂಟಿ ಕಾರ್ಯತಂತ್ರವನ್ನು ಅಂತಿಮಗೊಳಿಸಲು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಬೆಳಗ್ಗೆ ಮತ್ತೊಂದು ಸಭೆ ಕರೆದಿದ್ದಾರೆ.


