ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರು ಕಳೆದ ಕೆಲದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭೈರಪ್ಪನವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.
“ಡಾ. ಎಸ್.ಎಲ್. ಭೈರಪ್ಪರ ಅಗಲಿಕೆಯಿಂದ ನಾವು ಮಹಾನ್ ಚಿಂತಕರೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರು ನಿರ್ಭೀತ ಹಾಗೂ ಕಾಲಾತೀತ ಚಿಂತಕರಾಗಿದ್ದು, ತಮ್ಮ ಗಂಭೀರ ಮತ್ತು ಚಿಂತನಶೀಲ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ಅಪಾರವಾಗಿ ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು ಅದರೊಂದಿಗೆ ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿವೆ,” ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.
ಸಾಹಿತ್ಯ ಲೋಕ ಬಡವಾಗಿದೆ
“ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
“ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು,” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್. ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ ಎಂದಿದ್ದಾರೆ.
“ಇಹದ “ಯಾನ” ಅಂತ್ಯ.. ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್. ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಎಂದು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
“ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ, ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳ ನೀಡಿ, ಲಕ್ಷಾಂತರ ಓದುಗರ ಮನಗೆದ್ದಿದ್ದ, ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಅಧಿಕೃತ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ‘ಕನ್ನಡ ಸಾಹಿತ್ಯಕ್ಕೆ ವಿಶ್ವಮಾನ್ಯತೆ ತಂದು ಕೊಡುವ ಮೂಲಕ ರಾಷ್ಟ್ರ ಹಿತಾಸಕ್ತಿಯ ವಿಚಾರಗಳಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ನಾಡಿನ ಮಹಾನ್ ಚೇತನ, ಸರಸ್ವತಿ ಸಮ್ಮಾನ್ ಹಾಗೂ ಪದ್ಮ ಪ್ರಶಸ್ತಿ ಪುರಸ್ಕೃತ ಡಾ.ಎಸ್. ಎಲ್. ಭೈರಪ್ಪ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು. ತಮ್ಮ ಸಾಹಿತ್ಯದ ಮೂಲಕ ಸಾಮಾನ್ಯ ಓದುಗರನ್ನೂ ಆಕರ್ಷಿಸುವ ಕಾದಂಬರಿಗಳನ್ನು ರಚಿಸಿ ಅಸಂಖ್ಯಾತ ಓದುಗರನ್ನು ಹೊಂದಿದ್ದ, ಹಲವು ಭಾಷೆಗಳಿಗೆ ಅನುವಾದಗೊಂಡು ಜಗತ್ತಿನಾದ್ಯಂತ ಸಾಹಿತ್ಯಾಭಿಮಾನಿಗಳನ್ನು ಹೊಂದಿದ್ದ ಕರುನಾಡಿನ ಹೆಮ್ಮೆ ಎಸ್.ಎಲ್.ಭೈರಪ್ಪನವರು ಈ ನೆಲದ ಸೊಬಗು ಹಾಗೂ ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸಿ ಕನ್ನಡಿಗರ ಹೆಗ್ಗಳಿಕೆಯಾಗಿದ್ದರು.
ಸಾಮಾಜಿಕ ಬದಲಾವಣೆ ಹಾಗೂ ಭಾರತೀಯ ಸಂಸ್ಕೃತಿಯ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುವ ಹಾಗೂ ಅಸ್ತಿತ್ವ ಉಳಿಸುವ ಬದ್ಧತೆಯನ್ನು ತಮ್ಮ ಸಂಶೋಧನಾತ್ಮಕ ಕಾದಂಬರಿಗಳ ಮೂಲಕ ಸಾಕ್ಷೀಕರಿಸಿದ್ದರು. ಸಾಹಿತ್ಯಲೋಕದಲ್ಲಿ ಭೈರಪ್ಪನವರಿಗೆ ಭೈರಪ್ಪನವರೇ ಸಾಟಿಯಾಗಿ ನಿಲ್ಲಬಲ್ಲ ವ್ಯಕ್ತಿತ್ವ ಹಾಗೂ ಪ್ರತಿಭೆ ಅವರದ್ದಾಗಿತ್ತು. ರಾಷ್ಟ್ರೀಯ ಚಿಂತನೆ ಅವರ ಆದ್ಯತೆಯಾಗಿದ್ದರೆ, ಕನ್ನಡ ನಾಡು, ನುಡಿ, ಜನರ ಪರವಾದ ಚಿಂತನೆ ಅವರ ಬದ್ಧತೆಯಾಗಿತ್ತು. ಕನ್ನಡ ಸಾಹಿತ್ಯ ಲೋಕದ ಅತ್ಯಂತ ಸೃಜನಶೀಲ ಕಾದಂಬರಿಕಾರರಾಗಿ ಪದ್ಮಭೂಷಣ ಗೌರವಕ್ಕೂ ಪಾತ್ರರಾಗಿದ್ದ ಮಾನ್ಯ ಎಸ್.ಎಲ್.ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಅವರ ಅಗಲಿಕೆಯ ನೋವಿನಲ್ಲಿರುವ ಅವರ ಕುಟುಂಬ ವರ್ಗ ಹಾಗೂ ಕೋಟ್ಯಂತರ ಕನ್ನಡ ಸಾಹಿತ್ಯಾಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಓಂ ಶಾಂತಿಃ ಎಂದು ವಿಜಯೇಂದ್ರ ಅವರು ಬರೆದುಕೊಂಡಿದ್ದಾರೆ.
ಪ್ರಮುಖ ಕಾದಂಬರಿಗಳು
ಧರ್ಮಶ್ರೀ, ದೂರ ಸರಿದರು, ಮತದಾನ, ವಂಶವೃಕ್ಷ, ಜಲಪಾತ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ಗೃಹಭಂಗ, ನಿರಾಕರಣ, ಗ್ರಹಣ, ದಾಟು, ಅನ್ವೇಷಣ, ಪರ್ವ, ನೆಲೆ, ಸಾಕ್ಷಿ, ಅಂಚು, ತಂತು, ಸಾರ್ಥ, ಮಂದ್ರ, ಆವರಣ, ಕವಲು, ಯಾನ, ಉತ್ತರಕಾಂಡ. ಸರಸ್ವತೀ ಸಮ್ಮಾನ್ ಪ್ರಶಸ್ತಿಯನ್ನು ಕನ್ನಡದಲ್ಲಿ ಪಡೆದವರಲ್ಲಿ ಮೊದಲಿಗರು ಎಂಬ ಹೆಗ್ಗಳಿಕೆಗೆ ಭೈರಪ್ಪನವರು ಪಾತ್ರರಾಗಿದ್ದಾರೆ. 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನದ ಗೌರವವೂ ಅವರಿಗೆ ಸಿಕ್ಕಿತ್ತು.