ದೆಹಲಿಯಲ್ಲಿ ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಿಜೆಪಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸರು ಗೂಂಡಾಗಿರಿ ನಡೆಸಿದ್ದು, ಲಾಠಿಚಾರ್ಜ್ ಮಾಡಿದ್ದಾರೆ. ಪೊಲೀಸರ ಕ್ರೌರ್ಯಕ್ಕೆ 134ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಗಾಯಾಳು ವಿದ್ಯಾರ್ಥಿನಿಯೊಬ್ಬರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ದೆಹಲಿಯ ರಾಮ್ ಮನೋಹರ್ ಲೋಹಿಯಾ 110 ಗಾಯಾಳುಗಳನ್ನು, 24 ಜನರನ್ನು ಲೇಡಿ ಹಾರ್ಡಿಂಗ್ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. 20 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಎಂಟು ಮಂದಿಯನ್ನು ತುರ್ತುನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. 20 ವರ್ಷದ ವಿದ್ಯಾರ್ಥಿನಿಯ ತಲೆಯ ಭಾಗಕ್ಕೆ ತೀವ್ರ ಏಟ ಬಿದ್ದು ಮಿದುಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗುವ ಗಂಭೀರ ಸ್ಥಿತಿಯಲ್ಲಿ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಹೋರಾಟ ನಡೆಸುತ್ತಿರುವ ಸಿಜೆಪಿ ನಾಯಕರುಆರೋಗ್ಯ ಸಚಿವ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ಬೇಡಿಕೆಗಳನ್ನು ಮಂಡಿಸಿದರು. ಆದರೆ ಸರ್ಕಾರದಿಂದ ಭರವಸೆ ಸಿಗದ ಹಿನ್ನೆಲೆಯಲ್ಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ಸಿಜೆಪಿ ವಕ್ತಾರ ಆಶುತೋಷ್ ರಂಕಾ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರತಿಭಟನಾಕಾರರಿಂದ ಮಾತುಕತೆಗೆ ಪ್ರಸ್ತಾವ ಬಂದಿತ್ತು. ಅವರ ನಿಯೋಗದೊಂದಿಗೆ ಚರ್ಚೆ ನಡೆಸಲಾಗಿದೆ.ಮನವಿಯನ್ನೂ ಸ್ವೀಕರಿಸಿದ್ದೇನೆ. ಅದನ್ನು ಪರಿಶೀಲಿಸಲಾಗುವುದು ಎಂದು ನಡ್ಡಾ ತಿಳಿಸಿದ್ದಾರೆ.
ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಂ ವಾಂಗ್‌ಚುಕ್, ಪ್ರತಿಭಟನಾಕಾರರಿಗೆ ಸಂಸದರನ್ನು ಭೇಟಿಯಾಗಲು ಅವಕಾಶ ನೀಡುವವರೆಗೆ ಅಥವಾ ತಮಗೆ ಆಸ್ಪತ್ರೆಯಲ್ಲೇ ಅವರನ್ನು ಭೇಟಿ ಮಾಡಲು ಅವಕಾಶ ಸಿಗುವವರೆಗೆ ಉಪವಾಸ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಕರ್ನಾಟಕ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲೂ ಸಿಜೆಪಿಗೆ ಬೆಂಬಲವಾಗಿ ಪ್ರತಿಭಟನೆಗಳು ನಡೆದಿವೆ. ಅಹಮದಾಬಾದ್‌ನಲ್ಲಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದಡಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿದ್ದು, ಈ ವಿಷಯವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.


