ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಮತ್ತು ಮಲೆನಾಡುಗಳಲ್ಲಿ ಇನ್ನು ಮೂರು ದಿನ ೬೦ ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ವಿಪರೀತ ಮಳೆ ಸುರಿಯಲಿದೆ. ಮಲೆನಾಡು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಘಟ್ಟ ರಸ್ತೆಗಳಲ್ಲಿ ಜುಲೈ 11ರವರೆಗೆ ಭೂಕುಸಿತ ಸಂಭವಿಸುವ ಆತಂಕವಿದೆ.ಸಾರ್ವಜನಿಕರು ತುರ್ತು ಕೆಲಸಗಳಿಲ್ಲದೆ ಘಟ್ಟ ರಸ್ತೆಗಳಲ್ಲಿ ಪ್ರಯಾಣಿಸುವುದನ್ನು ಆರು ದಿನ ಮುಂದೂಡುವುದು ಉತ್ತಮ ಎಂದು ಹವಾಮಾನ ಇಲಾಖೆ ಹೇಳಿದೆ.
ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ರಿಂದ 48 ಗಂಟೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಟ್ಟ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಮುದ್ರ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ ಘಟ್ಟ ಪ್ರದೇಶ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮೂರು ದಿನ ಸಾಧಾರಣದಿಂದ ಮಧ್ಯಮಪ್ರಮಾಣದಲ್ಲಿ ಮಳೆ ಸುರಿಯಲಿದೆ. ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಳೆಯ ಕಟ್ಟಡಗಳು ಹಾಗೂ ಮರಗಳ ಕೆಳಗೆ ವಾಹನ ನಿಲ್ಲಿಸದಂತೆ ಸಾರ್ವಜನಿಕರು ಎಚ್ಚರ ವಹಿಸಲು ಕೋರಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಶಾಲೆಗಳಿಗೆ ಭಾರಿ ಮಳೆಯ ಕಾರಣ ಬುಧವಾರವೂ ರಜೆ ನೀಡಲಾಗಿದೆ. ನದಿಗಳು ಮತ್ತು ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳಲು ಅಥವಾ ವೀಕ್ಷಿಸಲು ನದಿ ತೀರಕ್ಕೆ ಹೋಗಬಾರದು. ಹಳ್ಳ ಕೊಳ್ಳಗಳು, ಕಾವೇರಿ ನದಿ ತುಂಬಿ ಹರಿಯುತ್ತಿದೆ. ಮಳೆ ನೀರು ನುಗ್ಗುವ ಸಾಧ್ಯತೆ ಇರುವ ತಗ್ಗು ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು. ಬಿರುಗಾಳಿ ಹಾಗೂ ಸಿಡಿಲು ಸಹಿತ ಮಳೆಯಾಗುತ್ತಿರುವುದರಿಂದ ರೈತರು ಜಾನುವಾರುಗಳನ್ನು ವಿದ್ಯುತ್ ಕಂಬ ಹಾಗೂ ಮರಗಳ ಕೆಳಗೆ ಕಟ್ಟಬಾರದು ಎಂದು ಸೂಚಿಸಲಾಗಿದೆ. ರಾಜ್ಯಾದ್ಯಂತ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಸಿಬ್ಬಂದಿ ಕಂಟ್ರೋಲ್ ರೂಮ್‌ಗಳನ್ನು ತೆರೆದಿವೆ.


