ದಲಿತ ಮಹಿಳೆ ಕೊಲೆಗೈದ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ: ತುಮಕೂರು ಕೋರ್ಟ್ ಮಹತ್ವದ ತೀರ್ಪು
ದಲಿತ ಮಹಿಳೆಯ ಕೊಲೆ ಪ್ರಕರಣದಲ್ಲಿ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.
ಸುದೀರ್ಘ ವಿಚಾರಣೆ ನಂತರ ತುಮಕೂರು 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ದಲಿತ ಮಹಿಳೆ ಕೊಲೆ ಪ್ರಕರಣದಲ್ಲಿ ಚಿಕ್ಕನಾಯಕನಹಳ್ಳಿಯ ಪಾಲಪುರ ಗ್ರಾಮದ 21 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿದೆ.
ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಿದ್ದಾರೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರಲ್ಲಿ ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು.
ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು. ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು.