ಹಾವೇರಿ: ವೇಗವಾಗಿ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಸೇರಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ 6 ಮಂದಿ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಬ್ಯಾಡಗಿಯ ಮೋಟೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಮೃತಪಟ್ಟವರನ್ನು ಅರ್ನವಿ (11), ಯಶ್ (20) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ 6 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ನಲ್ಲಿದ್ದ ಉಳಿದ 29 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆ ಸಂಚರಿಸುತ್ತಿದ್ದಾಗ ಮಾರ್ಗ ಮಧ್ಯದ ಮೊಟೇಬೆನ್ನೂರು ಗ್ರಾಮದ ಬಳಿ ಬಸ್ ಮುಂದೆ ಕಾರು ಬಂದಿದೆ. ಕಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ.
ಪರಿಣಾಮ ಡಿವೈಡರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಸ್ ಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಹಾಗೂ ಎಸ್‌ಪಿ ಯಶೋದಾ ವಂಟಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸತತ ಒಂದೂವರೆ ಗಂಟೆಗಳ ಕಾರ್ಯಚರಣೆ ನಡೆಸಿ ಬಸ್ ಮೇಲಕ್ಕೆ ಎತ್ತುವ ಕಾರ್ಯ ಮಾಡಲಾತು. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳ ರಕ್ಷಣಾ ಕಾರ್ಯ ಮಾಡಿದ್ದು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದರು.
ಹಲವು ಪುಟ್ಟ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ಯಾಡಗಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.