ಬೆಂಗಳೂರು: ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ ಖರೀದಿಗೆ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಸಂಬಂಧಪಟ್ಟವರಿಗೆ ಖರೀದಿ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕುಸುಬೆ ಬೆಳೆಯಲಾಗುತ್ತಿದೆ.
ಜನವರಿಯಿಂದ ಮಾರ್ಚ ಅವಧಿಯಲ್ಲಿ ಕಟಾವು ಪ್ರಕ್ರಿಯೆ ನಡೆಯಲಿದ್ದು, ಫೆಬ್ರವರಿಯಿಂದ ಏಪ್ರಿಲ್ ಅವಧಿಯಲ್ಲಿ ಮಾರುಕಟ್ಟೆಗೆ ಅಧಿಕ ಪ್ರಮಾಣದಲ್ಲಿ ಆವಕವಾಗಲಿದೆ. ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡದೆ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಸದುಪಯೋಗಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.