ಬೆಂಗಳೂರು: ಸತತ ಎರಡು ಗೆಲುವಿನಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ನಡೆದ ಮೊದಲ ಐಪಿಎಲ್ ಪಂದ್ಯದಲ್ಲೇ ಮುಗ್ಗರಿಸಿದೆ. ಗುಜರಾತ್ ಟೈಟಾನ್ಸ್ ತಂಡ 8 ವಿಕೆಟ್ ಗಳಿಂದ ಜಯಭೇರಿ ಬಾರಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ಗೆ 169 ರನ್ ಸಂಪಾದಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಗುಜರಾತ್ ಟೈಟಾನ್ಸ್ 17.5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಆರಂಭದಲ್ಲೇ ನಾಯಕ ಶುಭಮನ್ ಗಿಲ್ ವಿಕೆಟ್ ಕಳೆದುಕೊಂಡರೂ ಸಾಯಿ ಸುದರ್ಶನ್ ಮತ್ತು ಜೋಸ್ ಬಟ್ಲರ್ ಎರಡನೇ ವಿಕೆಟ್ ಗೆ 75 ರನ್ ಜೊತೆಯಾಟದಿಂದ ತಂಡವನ್ನು ಸುಭದ್ರ ಸ್ಥಿತಿಗೆ ತಂದು ನಿಲ್ಲಿಸಿದರು.
ಸಾಯಿ ಸುದರ್ಶನ್ 36 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 49 ರನ್ ಗಳಿಸಿದ್ದಾಗ ಔಟಾಗಿ 1 ರನ್ ನಿಂದ ಅರ್ಧಶತಕ ವಂಚಿತರಾದರು. ಜೋಸ್ ಬಟ್ಲರ್ 39 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್ ಒಳಗೊಂಡ 73 ರನ್ ಬಾರಿಸಿ ಅಜೇಯರಾಗಿ ಉಳಿದರು. ಇಂಪ್ಯಾಕ್ಟ್ ಆಟಗಾರನಾಗಿ ಅಖಾಡಕ್ಕೆ ಇಳಿದ ರುದರ್ ಫೋರ್ಡ್ 18 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 30 ರನ್ ಬಾರಿಸಿ ಉತ್ತಮ ಕಾಣಿಕೆ ನೀಡಿದರು.