ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ 50 ಕೋಟಿ ರೂ. ನಿಗದಿ ಮಾಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಪಟ್ಟಣದ ಸಿದ್ಧರಕಟ್ಟೆ ಸಮೀಪ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲಿಸಿ ಮಾತನಾಡಿದ ಸಚಿವರು, ರೋಪ್ ವೇ ಯೋಜನೆಗೆ ಹಂತ – ಹಂತವಾಗಿ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಲಾಗುವುದು. 10 ವರ್ಷದ ಹಿಂದೆಯೇ ಏಕಾಶಿಲಾ ಬೆಟ್ಟಕ್ಕೆ ರೋಪ್ ವೇ ಯೋಜನೆಗೆ 9 ಎಕರೆ ಜಾಗ ಮೀಸಲಿಡಲಾಗಿತ್ತು ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ರೋಪ್ ವೇ ಕಾಮಗಾರಿಗಳಿಗಾಗಿ ಪ್ರತ್ಯೇಕ ಪ್ರಾಧಿಕಾರ ಸ್ಥಾಪಿಸಲಾಗಿದೆ. ಆ ಇಲಾಖೆಯ ಮಾನದಂಡ ಗಳಂತೆ ಕಾಮಗಾರಿಗಳನ್ನು ರಾಜ್ಯದಲ್ಲಿ ನಿರ್ವಹಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.