ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಾವೇರಿ ಕ್ರಷರ್ನಲ್ಲಿ ಈ ದುರಂತ ಸಂಭವಿಸಿದ್ದು, ಬಂಡೆ ಕೆಳಗೆ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಎಂದಿನಂತೆ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದು ಇಟಾಚಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪ್ರಾಣ ಕಸಿದುಕೊಂಡಿದೆ. ತಾವರೆಕೆರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಹುಲವೇನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಕದ್ದುಮುಚ್ಚಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿತ್ತು, ಬೆಳಗ್ಗೆ ಕಾರ್ಮಿಕರು ಎಂದಿನಂತೆ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದಾಗ ದೊಡ್ಡ ಬಂಡೆಗಳನ್ನು ಪುಡಿ ಮಾಡಲು ತೀವ್ರತೆಯ ಸ್ಫೋಟಕ ಬಳಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಬಂಡೆ ಸ್ಫೋಟಿಸುವಾಗ ತೀವ್ರತೆಗೆ ಬಂಡೆ ಕುಸಿದು ಸಿಲುಕಿ ಏಳು ಜನ ಸ್ಥಳದಲ್ಲೇ ಅಸು ನೀಗಿದ್ದಾರೆ, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.


