ಶಿವಮೊಗ್ಗದಲ್ಲಿ ಬಾಲಕಿ ಮೇಲೆ 21 ವರ್ಷದ ಯುವಕ 2022ರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತ) ನ್ಯಾಯಾಲಯ ತಪ್ಪಿತಸ್ಥನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 50 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ವಿಫಲನಾದರೆ ಮೂರು ವರ್ಷ ಹೆಚ್ಚುವರಿ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ತೀರ್ಪು ನೀಡಿದ್ದು, ಸಂತ್ರಸ್ತೆಯ ತಾಯಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದೆದಾರೆ. 2022ರಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ಕುಂಸಿ ಠಾಣೆಯಲ್ಲಿ ದಾಖಲಾಗಿತ್ತು. ಅಂದಿನ ಕುಂಸಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅಭಯಪ್ರಕಾಶ್ ಸೋಮನಾಳ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶ್ರೀಧರ್ ಸರ್ಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ್ದರು.
ಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗ, ಕೇಂದ್ರ ಕಾರಾಗೃಹಕ್ಕೆ ಭೇಟಿ
ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬುಧವಾರ ಭೇಟಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಅಲೋಕ್ ಕುಮಾರ್ ಅವರನ್ನು ಸ್ವಾಗತಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ರಕ್ಷಣಾಧಿಕಾರಿ ಕಾರಿಯಪ್ಪ, ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್ ಸೇರಿದಂತೆ ಹಲವರು ಇದ್ದರು. ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿ, ಜೈಲು ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.


