ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಶಿವಾಜಿ ಜಯಂತಿ ಪ್ರಯುಕ್ತ ಭಾವಚಿತ್ರ ಮೆರವಣಿಗೆ ನಡೆಯುತ್ತಿರಬೇಕಾದರೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ನಡೆದಿದೆ.
ಫೆ.24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಳಾಗಿದೆ. ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಬಳಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ.
ಕಲ್ಲು ತೂರಾಟದಲ್ಲಿ ಪ್ರಕಾಶ್ ಅರಕೇರಿ ಎಂಬವರ ತಲೆಗೆ ಗಾಯವಾಗಿದ್ದು, ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಾಜಿ ಜಯಂತಿ ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲು ಬಂದು ಬಿದ್ದಿವೆ. ವೀಡಿಯೊಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಬಾಗಲಕೋಟೆಯಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗುತ್ತದೆ. ನಗರ ದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ತಿಳಿಸಿದ್ದಾರೆ.
ಕಲ್ಲು ತೂರಾಟದ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪೊಲೀಸ್ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದಾರೆ. ಯುವಕರು ರಸ್ತೆಯಲ್ಲಿ ಪ್ರತಿಭಟನೆಗೆ ಮುಂದಾಗಿ, ಕಲ್ಲೆಸೆದವರ ಬಂಧಿಸಬೇಕು ಇಲ್ಲದಿದ್ದಲ್ಲಿ ಬಾಗಲಕೋಟೆ ಬಂದ್ಗೆ ಕರೆ ನೀಡುತ್ತೇವೆ ಎಂದು ಹಿಂದೂ ಕಾರ್ಯಕರ್ತರು ಎಚ್ಚರಿಸಿದ್ದಾರೆ.
ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್ ನಿಷೇಧಾಜ್ಞೆ ಜಾರಿಗೊಳಿಸಿ ಸಾರ್ವಜನಿಕ ಸ್ಥಳದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದು, ಶಸ್ತ್ರಾಸ್ತ್ರ ಹಿಡಿದು ಓಡಾಡುವುದು, ಅನುಮತಿ ಇಲ್ಲದೆ ಸಭೆ ಸಮಾರಂಭ ಧರಣಿ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.


