ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ ಬುಧವಾರ ಬೆಳಗಿನ ಜಾವ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜನವರಿ 12ರ ರಾತ್ರಿ ಆರೋಗ್ಯ ಹದಗೆಟ್ಟಿದ್ದರಿಂದ ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುತ್ತುತುಮ್ಮೆ ಗ್ರಾಮದ ನಿವಾಸಿ. 2019ರಲ್ಲಿ ನ್ಯಾಯಾಲಯದಿಂದ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಉಡುಪಿ ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು.


