ಆಗಸ್ಟ್ 5 ರಂದು ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಕರ್ನಾಟಕ ಚುನಾವಣಾ ಆಯೋಗದ ವಿರುದ್ದ ದೊಡ್ಡ ಹೋರಾಟ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಇದರ ವಿರುದ್ದ ದೊಡ್ಡ ಹೋರಾಟ ನಡೆಯಲಿದೆ ಎಂದರು.
ಕರ್ನಾಟಕದ ಚುನಾವಣೆಯಲ್ಲಿ ಮತ ಕಳವು ನಡೆದಿದೆ, ಶೀಘ್ರವೇ ಸಾಕ್ಷ್ಯಗಳನ್ನು ನೀಡುವುದಾಗಿ ಲೋಕಸಭೆಯ ಪ್ರತಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಮುಂಗಾರು ಸಂಸತ್ ಅಧಿವೇಶನದಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಮಾತನಾಡಿದ್ದರು. ಯಾವ ರೀತಿ ಮತಕಳವು ಮಾಡಲು ಸಾಧ್ಯ ಎನ್ನುವುದನ್ನು ದೇಶದ ಜನರ ಮತ್ತು ಕೇಂದ್ರ ಚುನಾವಣಾ ಆಯೋಗದ ಮುಂದೆ ಇಡುತ್ತೇವೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ. ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ನಗರದಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಈ ಪಾದಯಾತ್ರೆ ನಡೆಯಲಿದೆ.