ಚುನಾವಣೆ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಹೊಸದಾಗಿ ಅರ್ಜಿ ಸಲ್ಲಿಕೆಯಾಗಿದೆ.
ಚುನಾವಣೆ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆ ನಡೆದಿದೆ ಎಂದು ಅರ್ಜಿದಾರರು ಆರೋಪಿಸಿದ್ದು, ಸಿಇಸಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಹಾಗೂ ಎಸ್ಐಟಿ ಇಲ್ಲವೇ ನ್ಯಾಯಾಂಗ ತನಿಖೆಗೆ ಆದೇಶ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದಾರೆ.
ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಎಂಬವರು ಸಂವಿಧಾನದ 32ನೇ ವಿಧಿಯಡಿ ಅರ್ಜಿ ಸಲ್ಲಿಸಿದ್ದಾರೆ. ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಸೆಕ್ಷನ್ 32 ಅಡಿ ಸಿಇಸಿ ಜ್ಞಾನೇಶ್ ಕುಮಾರ್ ಸೇರಿದಂತೆ ಕೆಲವು ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.
ಅರ್ಜಿಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಪ್ರಶ್ನಿಸಲಾಗಿದೆ. ಮತದಾರರ ನೋಂದಣಿಗೆ ಬಳಸುವ ಫಾರ್ಮ್-6 ನಿಯಮಾನುಸಾರ ತಿದ್ದುಪಡಿ ಮಾಡದೆ ಬದಲಾಯಿಸಲಾಗಿದೆ. ಸಂಬಂಧಿಸಿದ ಪೋರ್ಟಲ್ಗಳಲ್ಲಿ ಸಾಫ್ಟ್ವೇರ್ ಬದಲಾವಣೆಗಳನ್ನು ಪೂರ್ಣ ಆಯೋಗದ ಒಪ್ಪಿಗೆಯಿಲ್ಲದೆ ಮಾಡಲಾಗಿದೆ. ಮತದಾರರ ಪಟ್ಟಿಯ ಡೇಟಾಬೇಸ್ ಕೇಂದ್ರೀಕರಣ ಹಾಗೂ ಅರ್ಹ ಮತದಾರರ ಹೆಸರು ಮರುಸ್ಥಾಪನೆ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಎಸ್ಐಆರ್ಗೆ ಸಂಬಂಧಿಸಿದ ಕೆಲವು ನಿರ್ಧಾರಗಳ ಬಗ್ಗೆ ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಬಹುಮತದ ಒಪ್ಪಿಗೆಯಿಲ್ಲದೆ ಕೆಲವು ನಿರ್ಧಾರಗಳು ಜಾರಿಯಾಗಿವೆ ಎಂಬುದನ್ನೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ಬಳಸಲಾದ ಮತದಾರರ ಡೇಟಾಬೇಸ್ಗಳನ್ನು ಸ್ವತಂತ್ರವಾಗಿ ಪರಿಶೀಲಿಸಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ಥವಾ ನ್ಯಾಯಾಂಗ ಆಯೋಗ ರಚಿಸುವಂತೆ ಕೋರಲಾಗಿದೆ. ಸರ್ವರ್ ಲಾಗ್ಗಳು, ಡೇಟಾಬೇಸ್ ದಾಖಲೆಗಳು ಹಾಗೂ ಸಂಬಂಧಿತ ತಾಂತ್ರಿಕ ಮಾಹಿತಿಯನ್ನು ರಕ್ಷಿಸುವಂತೆ ಮನವಿ ಮಾಡಲಾಗಿದೆ.
ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ಅಕ್ಟೋಬರ್ 2ರಿಂದ ದೇಶಾದ್ಯಂತ ಪ್ರತಿಭಟನೆ ಆರಂಭಿಸುವುದಾಗಿ ಕಾಕ್ರೋಚ್ ಜನತಾ ಪಕ್ಷ ಘೋಷಿಸಿದೆ. ಮುಂಬೈನಿಂದ ಪ್ರತಿಭಟನೆ ಆರಂಭಿಸಿ
ದೇಶದ ವಿವಿಧ ನಗರಗಳಿಗೆ ವಿಸ್ತರಿಸಲಾಗುವುದು ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.


