ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಬೆಟ್ಟಾ ನದಿ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆಯಿದ್ದು, ಸಾವಿನ ಸಂಖ್ಯೆ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಬೃಹತ್ ಕಾರ್ಯಾಚರಣೆ ನಡೆಸುತ್ತಿವೆ. ಹಮೀರ್‌ಪುರದ ಮೋರಾ ಕಂದರ್ ಮತ್ತು ಕುರಾರಾ ಪ್ರದೇಶಗಳನ್ನ ಸಂಪರ್ಕಿಸಲು ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತಿತ್ತು. ಗುರುವಾರ ತಡರಾತ್ರಿ ಬಲವಾದ ಬಿರುಗಾಳಿ ಅಪ್ಪಳಿಸಿದ್ದರಿಂದ ಸೇತುವೆಯಸ್ಲ್ಯಾಬ್ ಕುಸಿದು ಬಿದ್ದಿದೆ.
ದುರಂತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ, ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ಸಾಧ್ಯವಿರುವ ಎಲ್ಲ ಸಹಾಯ ಒದಗಿಸಬೇಕು ಎಂದು ಸೂಚಿಸಿದ್ದಾರೆ.


