ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಸೂಚನೆ ಹೊರಡಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ ಸೇರಿದಂತೆ ಬೆಂಗಳೂರು ನಗರ ಅಭಿವೃದ್ಧಿ ಸಂಬಂಧಿತ ಜವಾಬ್ದಾರಿಗಳು ನೀಡಲಾಗಿದ್ದವು.
ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ (ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ಪಾಲಿಕೆಗಳು ಮತ್ತು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು), ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಎಲ್ ಸೇರಿದಂತೆ ಆಡಳಿತ ಜವಾಬ್ದಾರಿ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಆದರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಅವರ ಖಾತೆ ಹಾಗೆಯೇ ಉಳಿದಿದ್ದು, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಜವಾಬ್ದಾರಿ ಮಾತ್ರ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿದೆ.
ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ, ಇಬ್ಬರು ಸಚಿವರಿಗೆ ಸಂಬಂಧಿಸಿದ ಖಾತೆಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಬದಲಾವಣೆಗಳು ಮಾಡಲಾಗಿದೆ.