ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
\ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.
ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂತು. ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆ ಉದ್ದೇಶ. ವರ್ಷದಲ್ಲಿ ನೂರು ದಿನ ಉದ್ಯೋಗ ಅವಕಾಶ ಈ ಯೋಜನೆಯಲ್ಲಿ ಸಿಗುತ್ತಿತ್ತು ಎಂದು ತಿಳಿಸಿದ್ದಾರೆ.
ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗವನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಉದ್ಯೋಗದ ಹಕ್ಕು ಇಲ್ಲವಾಗಿಸಿದೆ. ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಜ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ ಎಂದು ಅವರು ಹೇಳಿದ್ದಾರೆ.
28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ. ಮನ್ರೆಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯ ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನ ತಲುಪಬೇಕು. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕಿದೆ ಎಂದು ಕರೆ ನೀಡಿದ್ದಾರೆ.
ವಿಬಿಜಿ ರಾಮ್ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ನೂತನ ಕಾಯ್ದೆಯ ಕುರಿತು ನಿರ್ಣಯ ಕೈಗೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ. ಜಂಟಿ ಸದನ 22 ರಂದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ಕರೆಯಲು ತೀರ್ಮಾನಿಸಿದೆ. 22 ರಿಂದ 31 ರವರಿಗೆ ಜಂಟಿ ಅಧಿವೇಶನ ನಡೆಯಲಿದೆ.
ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು. ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ,ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.


