ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.
ಆರೋಪಿಗಳು ಒಂದೂವರೆ ವರ್ಷಗಳಿಂದ ಪಾಕಿಸ್ತಾನಕ್ಕೆ ರಹಸ್ಯ ತಾಂತ್ರಿಕ ಮಾಹಿತಿ ರವಾನಿಸುತ್ತಿದ್ದರು. ದೇಶ ಭದ್ರತೆ ದೃಷ್ಟಿಯಿಂದ ಈ ಕೃತ್ಯ ಗಂಭೀರ ಕಳವಳಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕೊಚ್ಚಿನ್ ಶಿಪ್ ಯಾರ್ಡ್ ಭಾರತೀಯ ನೌಕಾಪಡೆಗೆ ಟಗ್‌ಗಳನ್ನು ನಿರ್ಮಿಸಿ ಕೊಡುವ ಸಂಸ್ಥೆಯಾಗಿದ್ದು, ಖಾಸಗಿ ಸಂಸ್ಥೆಗಳಿಗೂ ಹಡಗುಗಳನ್ನು ನಿರ್ಮಿಸಿಕೊಡುತ್ತಿದ್ದು, ಪ್ರಧಾನ ಕಚೇರಿ ಕೇರಳದಲ್ಲಿದೆ.
ಒಂದೂವರೆ ವರ್ಷಗಳಿಂದ ಆರೋಪಿಗಳು ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ, ರಹಸ್ಯ ತಾಂತ್ರಿಕ ವಿವರಗಳನ್ನು ವಾಟ್ಸಾಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎಂಬ ಗಂಭೀರ ವಿಚಾರ ಬಯಲಾಗಿದೆ.
ಕೇರಳದಲ್ಲಿ ಕೆಲಸ ಮಾಡುವ ಸಮಯದಲ್ಲಿ ರೋಹಿತ್ ಹಲವು ಬಾರಿ ಮಾಹಿತಿ ಹಂಚಿಕೊಂಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ನೀಡಿದ ದೂರಿನ ಆಧಾರದಲ್ಲಿ ಉಡುಪಿ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಾಹಿತಿ ಹಂಚಿಕೆ ಮಾಡಿ ಹಣ ಪಡೆಯುತ್ತಿದ್ದರೆಂಬ ಅಂಶವೂ ಪತ್ತೆಯಾಗಿದೆ.
ಪ್ರಕರಣ ಸಂಬಂಧ ರಾಷ್ಟ್ರೀಯ ಮಟ್ಟದ ತನಿಖಾ ಸಂಸ್ಥೆಗಳು ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.


